Advertisement

MUDA CASE: ನೈತಿಕ ಹೊಣೆ ಹೊತ್ತು ಪದತ್ಯಾಗ: ವಿಪಕ್ಷ ಪಟ್ಟು; ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ

01:27 AM Sep 25, 2024 | Team Udayavani |

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಹೈಕೋರ್ಟ್‌ ತೀರ್ಪು ಹೊರಬಿದ್ದಿದ್ದು, ಅಕ್ರಮದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ.

Advertisement

ತೀರ್ಪು ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ, ಅಕ್ರ ಮದ ಹೊಣೆ ಹೊತ್ತು, ನೈತಿಕತೆಯಿಂದ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್‌ ಎತ್ತಿ ಹಿಡಿದಿದೆ ಎಂದರು.

ಹೈಕೋರ್ಟ್‌ನಲ್ಲಿ ಸುದೀರ್ಘ‌ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಕಾಂಗ್ರೆಸಿಗರು ರಾಜ್ಯ ಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್‌ ಎಂದು ಆರೋಪಿಸಿದ್ದರು. ಆದರೆ ಈಗ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿದೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್‌ ತಿಳಿಸಿದೆ. ಹೀಗಾಗಿ ಕಾಂಗ್ರೆಸ್‌ ನಾಯಕರು ರಾಜ್ಯ ಪಾಲರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಹಗರಣಗಳ ಸಂಬಂಧ ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಿತ್ತು.

ಅನಂತರ ಸ್ವತಃ ಸಿಎಂ ಕುಟುಂಬವೇ ಫ‌ಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್‌ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದೆವು ಎಂದರು. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಭರವಸೆ ನೀಡಿದ್ದರು. ಆದರೆ ಅದು ಕುಸಿದು ಬಿದ್ದಿದೆ. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ ಎಂದರು.

Advertisement

ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್‌ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು. ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್‌ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ಉಪಸ್ಥಿತರಿದ್ದರು.

ರಾಜೀನಾಮೆಗೆ ಜೆಡಿಎಸ್‌ ತೀವ್ರ ಆಗ್ರಹ
“ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್‌ ರಾಮಯ್ಯ’ ಎಂದು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಜಾತ್ಯತೀತ ಜನತಾ ದಳ (ಜೆಡಿಎಸ್‌), ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.

ದಿಲ್ಲಿಗಿಂತ ಭಿನ್ನ
ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ ದಿಲ್ಲಿ ಮತ್ತು ಕರ್ನಾಟಕದ ಪ್ರಕರಣಗಳು ಭಿನ್ನ. ದಿಲ್ಲಿ ಪೊಲೀಸ್‌ ವ್ಯವಸ್ಥೆ ಕೇಂದ್ರ ಸರಕಾರದ ಆಧೀನದಲ್ಲಿದೆ, ಆದರೆ ರಾಜ್ಯದಲ್ಲಿ ಸಿಎಂ ಆಧೀನದಲ್ಲೇ ಇದೆ. ಹೀಗಾಗಿ ಅವರ ವಿರುದ್ಧವೇ ತನಿಖೆ ಸುಲಭವಲ್ಲ ಎಂಬುದು ಬಿಜೆಪಿಯ ವಾದ.

ಸಿಎಂ ರಾಜೀನಾಮೆ ನೀಡದಿದ್ದರೆ
ಹೋರಾಟಕ್ಕೆ ವಿಪಕ್ಷಗಳು ಸಜ್ಜು
ಬೆಂಗಳೂರು: ನ್ಯಾಯಾಲಯ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸ ಲಾಗಿದೆ. ಬುಧವಾರದಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಚಿಂತನೆ ನಡೆಸಿದೆ. ಅಲ್ಲದೆ ಮಂಗಳವಾರವೂ ರಾಜ್ಯದ ಎಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಜೀನಾ ಮೆ ನೀಡಲೇ ಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಾಂದೋಲನ ಮೂಡಿಸಲು ತಯಾರಿ ಮಾಡಿ ಕೊಂಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೋರಾಟದ ಬಗ್ಗೆ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ
ಮುಡಾ ಹಗರಣ ಸಂಬಂಧ ಅಭಿಯೋಜನೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ಕರೆ ನೀಡಿದ್ದಾರೆ.

ಹೈಕೋರ್ಟಿನ ತೀರ್ಪು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್‌ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next