ಮೈಸೂರು: ಭಾರತ ಚುನಾವಣಾ ಆಯೋಗ ಪ್ರತಿಯೊಂದು ವಿಷಯವನ್ನುಗಂಭೀರವಾಗಿ ಗಮನಿಸುತ್ತಿದೆ. ಯಾರೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ನೇರವಾಗಿ ಚುನಾವಣಾ ಆಯೋಗಕ್ಕೆ ದೂರು ಹೋಗುತ್ತದೆ. ಇಂತಹ ಪರಿಸ್ಥಿತಿ ಬಾರದಂತೆ ಎಚ್ಚರಿಕೆವಹಿಸಿ ಎಂದು ನೂತನ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಹೇಳಿದರು.
ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಅಭಿರಾಮ್ ಜಿ.ಶಂಕರ್ ಕೂಡಲೇ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಚುನಾವಣಾ ಕೆಲಸಗಳ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಆದಾಯ ತೆರಿಗೆ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳು, ಪೊಲೀಸ್ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳು, ಅಬಕಾರಿ ಪ್ರಕರಣಗಳು ಮುಂತಾದವುಗಳ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಮತಗಟ್ಟೆ ಅಧ್ಯಕ್ಷೀಯ ಅಧಿಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ನಿಯೋಜನೆ, ತರಬೇತಿ, ವಿದ್ಯುನ್ಮಾನ ಮತಯಂತ್ರಗಳ ಲಭ್ಯತೆ ಹಾಗೂ ಸಿದ್ಧತೆಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯ ಅಂತಿಮ ಪ್ರಕಟಣೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಪಡೆದರು.
ಸಭೆಯಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕಾಂತರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲೋಕನಾಥ್, ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.