ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ
ಎಸಿಬಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಭಾನುವಾರ ನಗರದ ಮೈಸೂರ್ ಬ್ಯಾಂಕ್ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಶಾಸಕರು, ಬಿಬಿಎಂಪಿ ಸದಸ್ಯರು, ನೂರಾರು ಮುಖಂಡರು ಭಾಗಿಯಾಗಿದ್ದರು.
ಅರವಿಂದ್ ಲಿಂಬಾವಳಿ ಮಾತನಾಡಿ ‘ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ನಮಗೆ ದಾಖಲೆ ಸಿಕ್ಕಿದೆ’ ಎಂದರು. ವಿ.ಸೋಮಣ್ಣ ಮಾತನಾಡಿ ‘ಸಿದ್ದರಾಮಯ್ಯ ಸರ್ಕಾರದ ಆಯುಷ್ಯ ಮುಗಿದಿದೆ’ ಎಂದರು. ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ಸಿದ್ದರಾಮಯ್ಯ ವ್ಯಂಗ್ಯ
ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಬಿಜೆಪಿಯವರು ಯಾವ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಸಿಬಿಗೆ ದೂರು ಬಂದಿದೆ ಹೀಗಾಗಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿಯವರಿಗೆ ಕಾನೂನು ಗೊತ್ತಿಲ್ವೆ,ನಾವೇನು ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಬಿಜೆಪಿಯೇ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ’ ಎಂದು ತಿರುಗೇಟು ನೀಡಿದರು.
ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ಡಿನೊಟಿಫೀಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ತಪ್ಪು ಮಾಡಿದ್ದಾರೆಂದು ಹೇಳಿಕೆ ನೀಡುವಂತೆ ಎಸಿಬಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತನಿಖಾ ದಳದ ಉಪ ಕಾರ್ಯದರ್ಶಿ ಕೆಎಎಸ್ ಅಧಿಕಾರಿ ಬಸವರಾಜೇಂದ್ರ “ಬಾಂಬ್’ಸಿಡಿಸಿದ್ದರು.