Advertisement

ಬಾಕಿ ವಿಲೇವಾರಿ ಶೀಘ್ರಗೊಳಿಸಿ: ಮಹೇಶ್ವರ ರಾವ್‌ ಸೂಚನೆ

09:58 PM Oct 20, 2020 | mahesh |

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, 2,068 ಪ್ರಕರಣಗಳಲ್ಲಿ 2.72 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಉಳಿದ ಪ್ರಕರಣಗಳಲ್ಲಿ ಶೀಘ್ರವಾಗಿ ಪರಿಹಾರ ನೀಡಬೇಕು ಎಂದು ಸರಕಾರದ ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್‌-19 ಪ್ರಸ್ತುತ ಸ್ಥಿತಿ, ಪ್ರಕೃತಿ ವಿಕೋಪ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಜಿಲ್ಲೆಯಲ್ಲಿ ಸರಕಾರದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಖಾಸಗಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಮರಳಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಳೆ ಪ್ರಮಾಣ ಕಡಿಮೆ ಆಗಿರುವ ಹಿನ್ನೆಲೆ ಮರಳಿನ ಬ್ಲಾಕ್‌ಗಳನ್ನು ಗುರುತಿಸುವುದ ರೊಂದಿಗೆ ನಿಯಮಾನುಸಾರ ಮರಳು ತೆಗೆಯಲು ಅನುಮತಿ ನೀಡಬೇಕು ಎಂದವರು ತಿಳಿಸಿದರು. ಗ್ರಾಮಸೇವಕರು ಹಾಗೂ ಗ್ರಾಮ ಲೆಕ್ಕಿಗರು ಗ್ರಾಮ ವ್ಯಾಪ್ತಿಗಳಲ್ಲಿ ಸರ್ವೇ ನಂಬರ್‌ ಅನ್ವಯ ಬೆಳೆಗಳ ನಿಖರ ಮಾಹಿತಿಯನ್ನು ಹೊಂದಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಜಿ. ಜಗದೀಶ್‌, ಜಿಲ್ಲಾ ಪಂಚಾಯತ್‌ ಸಿಇಒ ಡಾ| ನವೀನ್‌ ಭಟ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಎಸ್‌ಪಿ ಕುಮಾರ ಚಂದ್ರ, ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಔಷಧ ವ್ಯವಸ್ಥೆ
ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚು ಮಾಡುವುದರೊಂದಿಗೆ ಸೋಂಕಿತರನ್ನು ಪ್ರತ್ಯೇಕಿಸಿ ಸೋಂಕು ಹರಡದಂತೆ ಎಚ್ಚರ ವಹಿಸಬೇಕು. ಕೋವಿಡ್‌ ನಿಯಂತ್ರಣಕ್ಕೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಔಷಧ ದಾಸ್ತಾನು ಹಾಗೂ ಸುರಕ್ಷತಾ ಪರಿಕರಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಮುಂದಿನ ದಿನಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧ ಹಾಗೂ ಪರಿಕರಗಳನ್ನು ಸರಕಾರದಿಂದ ವ್ಯವಸ್ಥೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next