Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‌ಸಿಟಿ ಹಾಗೂ ನಗರೋತ್ಥಾನ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆಯ ಯಾವುದೇ ಕಾಮಗಾರಿಗಳು ಬಾಕಿ ಉಳಿಯದಂತೆ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
Related Articles
Advertisement
ಅಶೋಕ ವೃತ್ತ ರಸ್ತೆ ಹಾಗೂ ತರಕಾರಿ ಮಾರುಕಟ್ಟೆ ರಸ್ತೆ ಅಗಲೀಕರಣಕ್ಕೆ ಅಗತ್ಯವಾದ ಜಾಗವನ್ನು ಪಡೆದುಕೊಂಡು ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು. ಅದೇ ರೀತಿ ವೆಂಗುರ್ಲಾ ಮತ್ತು ಗಣೇಶಪುರ ರಸ್ತೆ ಅಭಿವೃದ್ಧಿ ಕೆಲಸವನ್ನು ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಬೇಕು. ಪ್ರತಿ 15 ದಿನಗಳಿಗೊಮ್ಮೆ ಸಮನ್ವಯ ಸಭೆ ನಡೆಸಬೇಕು ಎಂದು ಹೇಳಿದರು.
ಸ್ಮಾರ್ಟ್‌ಸಿಟಿ ಕಾಮಗಾರಿ ಹಾಗೂ ಪೈಪ್ ಲೈನ್ ಸ್ಥಳಾಂತರ ಮತ್ತಿತರ ಸೌಕರ್ಯಗಳಿಗೆ ಅಗತ್ಯವಿರುವ ಅನುದಾನ ಪಡೆಯಲು ಸ್ಮಾರ್ಟ್‌ಸಿಟಿ ವತಿಯಿಂದ ಪ್ರಸ್ತಾವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು. ನಾನಾವಾಡಿ ರಸ್ತೆ ವಿಸ್ತರಣೆಗೆ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವುದು ಮತ್ತು ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್ ವರೆಗೆ ಕಾಂಗ್ರೆಸ್ ರಸ್ತೆಯಲ್ಲಿ ಫುಟ್‌ಪಾತ್ ಅಭಿವೃದ್ಧಿ ಮತ್ತು ಸೈಕಲ್ ಟ್ರ್ಯಾಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರಾಕ್ಷೇಪಣ ಪತ್ರ ಪಡೆಯುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್ ವರೆಗೆ ಕಾಂಗ್ರೆಸ್ ರಸ್ತೆಯಲ್ಲಿ ಫುಟ್ ಪಾಥ್ ಅಭಿವೃದ್ಧಿಪಡಿಸುವುದು ಮತ್ತು ಸೈಕಲ್ ಟ್ರ್ಯಾಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಿರೀನ್ ನದಾಫ್ ಹೇಳಿದರು. ದಂಡುಮಂಡಳಿ ವ್ಯಾಪ್ತಿಯಲ್ಲಿ ಬೀದಿದೀಪ ನಿರ್ವಹಣೆ ಆದರ ಹಣವನ್ನು ರಾಜ್ಯ ಸರ್ಕಾರದ ವತಿಯಿಂದ ಪಾವತಿಸಲು ಕ್ರಮ ಕೈಗೊಳ್ಳಬೇಕು.ದಂಡುಮಂಡಳಿಯ ವ್ಯಾಪ್ತಿಯಲ್ಲಿ ಇರುವ ಕಸಾಯಿಖಾನೆ ನಿರ್ಮಾಣಕ್ಕೆ ಬೇರೆ ಕಡೆ ಜಾಗೆ ಒದಗಿಸಬೇಕು ಎಂದು ದಂಡುಮಂಡಳಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬರ್ಚಸ್ವಾ ಹೇಳಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಸ್ಮಾರ್ಟ್‌ಸಿಟಿ ಯೋಜನೆ, ಮಹಾನಗರ ಪಾಲಿಕೆ, ಹೆಸ್ಕಾಂ, ಸಾರಿಗೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.