Advertisement

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

10:21 AM Nov 16, 2024 | Team Udayavani |

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ.

Advertisement

ಉಪ್ಪಿನಂಗಡಿ ಠಾಣಾ ಎಸೈ ಅವಿನಾಶ್ ಅವರ ದೂರಿನಂತೆ ಪ್ರಕರಣ ದಾಖಲಾಗಿದೆ.

ಶುಕ್ರವಾರ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆದಿದ್ದು, ಪ್ರತಿಭಟನಾ ಸಭೆಯಲ್ಲಿದ್ದವರು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆಯ ಸ್ಥಳದಿಂದ ಸುಮಾರು 1 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಪೇಟೆಗೆ ಬಂದು ಮದ್ಯಾಹ್ನ 2.30 ಗಂಟೆಗೆ ರಸ್ತೆತಡೆಯನ್ನು ಪ್ರಾರಂಭಿಸಿದ್ದು ರಸ್ತೆಯ ಮಧ್ಯದಲ್ಲಿಯೇ ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪ್ರತಿಭಟನಾಕಾರರಾದ ಸುಧೀರ್ ಶೆಟ್ಟಿ, ನವೀನ್ ನೆರಿಯಾ, ಸತೀಶ್ ಶೆಟ್ಟಿ ಬಲ್ಯ, ಉಮೇಶ್ ಸಾಯಿರಾಮ್, ವೆಂಕಟ ಒಳಲಂಬೆ, ಪ್ರಕಾಶ್ ಗುಂಡ್ಯ, ಪ್ರಸಾದ್ ನೆಟ್ಟಣ, ಸೈಯದ್ ಮೀರಾ ಸಾಹೇಬ್, ಉಮೇಶ್ ಬಲ್ಯ, ನವೀನ್ ರೆಖ್ಯಾ, ಯತೀಶ್ ಗುಂಡ್ಯ, ಗಣೇಶ್ ಅನಿಲ ಮತ್ತು ಇತರರು ಅಕ್ರಮ ಕೂಟ ಸೇರಿಕೊಂಡು ಅಕ್ರಮ ರಸ್ತೆ ತಡೆ ಮಾಡಿ ಪ್ರತಿಭಟನೆಯನ್ನು ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡದಂತೆ ಹಾಗೂ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸದಂತೆ ತಿಳಿಸಿದರೂ ಇವರುಗಳು ಕೇಳದೆ ಪ್ರತಿಭಟನೆ ಮುಂದುವರಿಸಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರ್ಕಾರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದ್ದಾರೆ.

ಈ ರೀತಿ ಅಕ್ರಮ ಕೂಟ ಸೇರಿಕೊಂಡು ರಸ್ತೆ ತಡೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ 3.30 ಗಂಟೆಯ ತನಕ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಶುಕ್ರವಾರ ಗುಂಡ್ಯದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನಾ ಸಭೆ ನಡೆಸಲಾಗಿತ್ತು. ಪ್ರತಿಭಟನಾಕಾರರರಿಂದ ಮನವಿ ಸ್ವೀಕರಿಸಲು ಉನ್ನತ ಅಧಿಕಾರಿಗಳು ಆಗಮಿಸುವುದು ವಿಳಂಬವಾದ ಹಿನ್ನೆಲೆ ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಡ್ಯ ಜಂಕ್ಷನ್ ಗೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಹೆದ್ದಾರಿ ತಡೆ ನಡೆಸಿದ ಘಟನೆ ನಡೆದಿತ್ತು. ಬಳಿಕ ಪುತ್ತೂರು ಸಹಾಯಕ ಆಯುಕ್ತರು ಆಗಮಿಸಿ ಮನವಿ ಸ್ವೀಕರಿಸಿದ ಬಳಿಕ ಹೆದ್ದಾರಿ ತಡೆ ಕೈ ಬಿಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next