ಸುಳ್ಯ: ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು ಹಾಗೂ ಪೋಷಕರಿಗೆ ಧೈರ್ಯ ತುಂಬಿದರು.
ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಈ ಅಮಾನವೀಯ ಕೃತ್ಯ ಖಂಡನೀಯ. ಆ್ಯಸಿಡ್ ದಾಳಿಯಾಗಿರುವ ವಿದ್ಯಾರ್ಥಿನಿಯರ ಚಿಕಿತ್ಸೆ ಬಗ್ಗೆ ವಿಶೇಷ ಗಮನ ಹರಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿರುವೆ. ಇಂತಹ ಘಟನೆಗಳು ಮರಕಳಿಸಬಾರದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಸರಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಆರೋಪಿಗೆ ಕಠಿನ ಶಿಕ್ಷೆ ನೀಡಬೇಕು, ವಿದ್ಯಾರ್ಥಿನಿಯರಿಗೆ ಸರಕಾರದಿಂದ ಸಂಪೂರ್ಣ ಚಿಕಿತ್ಸಾ ವೆಚ್ಚ ಹಾಗೂ ಗರಿಷ್ಠ ಮೊತ್ತದ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಜತೆಗಿದ್ದ ದ.ಕ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಸಮಾಲೋಚಿಸಿ ತನಿಖೆಯನ್ನು ತೀವ್ರಗೊಳಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆ ನಡೆಯದಂತೆ ಸೂಕ್ತ ಎಚ್ಚರಿಕೆ ಕ್ರಮವನ್ನು ವಹಿಸುವಂತೆ ಸೂಚನೆ ನೀಡಿದರು.
ಸಿದ್ದರಾಮಯ್ಯ ಹಾಗೂ ಡಿಕೆಶಿ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ಕೆಡೆಂಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಅತ್ಯಂತ ಕ್ರೂರ ಘಟನೆ: ಸಚಿವೆ ಹೆಬ್ಟಾಳ್ಕರ್
ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರವಾಗಿದ್ದು, ಪೊಲೀಸರು ಸಮಗ್ರ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದ್ದಾರೆ.
ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮಹಿಳೆಯರ ಸುರಕ್ಷೆ ಮತ್ತು ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿನ ಶಿಕ್ಷೆ ಆಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕಠಿನ ಕ್ರಮಕ್ಕೆ ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಕಡಬದ ಸರಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ. ಸರಕಾರದಿಂದ ವಿದ್ಯಾರ್ಥಿನಿಯರಿಗೆ ಪರಿಹಾರ ಸೇರಿದಂತೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಂತಹ ಅಮಾನವೀಯ ಘಟನೆಗಳು ಖಂಡನೀಯ.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.