ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು.
ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದು, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದರು.
ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಕೂಡ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.
ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದೆ.