Advertisement

ರಜೆ ನೀಡದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ

11:37 PM Mar 11, 2020 | Lakshmi GovindaRaj |

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜಾ ನೀಡುವಂತೆ ಸರ್ಕಾರ ಹೊರಡಿಸಿರುವ ಆದೇಶ ಉಲ್ಲಂ ಸುವ ಶಾಲೆಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಆನಂದರಾವ್‌ ವೃತ್ತದ ಶ್ರೀ ಜಗದ್ಗುರು ರೇಣುಕಾಚಾರ್ಯ ಪಿಯು ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೃಷ್ಟಿಸಿರುವ ಭೀತಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಯ ನರ್ಸರಿ, ಎಲ್‌ಕೆಜಿ, ಯುಕೆಜಿ ಮತ್ತು 1-5ನೇ ತರಗತಿವರೆಗೆ ರಜೆ ನೀಡಲಾಗಿದೆ. ಈ ಆದೇಶ ಪಾಲಿಸುವುದು ಈ ಪ್ರದೇಶಗಳಲ್ಲಿರುವ ಎಲ್ಲ ಶಾಲೆಗಳ ಕರ್ತವ್ಯ.

ಆದರೆ , ಕೆಲವು ಖಾಸಗಿ ಶಾಲೆಗಳು ಸರ್ಕಾರದ ಈ ಆದೇಶಕ್ಕೆ ಗೌರವ ಕೊಡದೆ ತಮ್ಮದೇ ಬೇರೆ ಸಾಮ್ರಾಜ್ಯ ಎಂದು ತಿಳಿದು ವ್ಯತಿರಿಕ್ತವಾಗಿ ವರ್ತಿಸುತ್ತಿರುವುದು ತಿಳಿದು ಬಂದಿದೆ. ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸದೇ ಇರುವ ಖಾಸಗಿ ಶಾಲೆಗಳಿಗೆ ಈ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಸರ್ಕಾರದ ಆದೇಶ ಪಾಲಿಸದಿರುವ ಶಾಲೆಗಳು ಅದೆಷ್ಟೇ ಪ್ರಭಾವಶಾಲಿಯಾಗಿದ್ದರೂ, ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಎಷ್ಟು ಶಾಲೆಗಳು ತೆರೆದಿವೆ, ಎಷ್ಟು ಶಾಲೆಗಳಿಗೆ ರಜೆ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿ ಸ್ಥಳೀಯ ಶಿಕ್ಷಣಾಧಿಕಾರಿಗಳ ಮೂಲಕ ವರದಿ ತರಿಸಿಕೊಳ್ಳಲಾಗುವುದು. ಬಳಿಕ ಸರ್ಕಾರದ ಆದೇಶ ಉಲ್ಲಂಘಿಸಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾನೂನು ಕ್ರಮದ ತಾಕೀತು: ಸರ್ಕಾರಿ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕ್ರಮ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂಜಾಗ್ರತಾ ಕ್ರಮವಾಗಿ 5ನೇ ತರಗತಿವರೆಗಿನ ಮಕ್ಕಳಿಗೆ ರಜೆ ನೀಡಲಾಗಿದೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಇಲಾಖೆ ಸಮಕ್ಷಮದಲ್ಲಿ ರಜೆ ಘೋಷಣೆ ಮಾಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಹೇಳಿದರು.

Advertisement

ಖಾಸಗಿ ಶಾಲೆಗಳ ಪರೀಕ್ಷೆ ರದ್ದು: ಬೆಂಗಳೂರಿನ ಕೆಲ ಖಾಸಗಿ ಶಾಲೆಗಳಲ್ಲಿ ನರ್ಸರಿ, ಎಲ್‌ಕೆಜಿ, ಯುಕೆಜಿ ಸೇರಿ 1- 5ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡುವುದರ ಜತೆಗೆ ವಾರ್ಷಿಕ ಪರೀಕ್ಷೆಯನ್ನೇ ರದ್ದು ಮಾಡಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಬರುವಂತೆ ಪಾಲಕರಿಗೆ ಸೂಚಿಸಲಾಗಿದೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪರೀಕ್ಷೆ ರದ್ದುಪಡಿಸಿದ ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ಪಾಲಕ, ಪೋಷಕರಿಗೆ ಸಂದೇಶದ ಮೂಲಕ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಲೀಕ್‌: ಪೊಲೀಸ್‌ ಇಲಾಖೆಗೆ ಪತ್ರ
ಬೆಂಗಳೂರು: ಫೆ.2ರಿಂದ 24ರ ತನಕ ನಡೆದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ಪ್ರಶ್ನೆ ಪತ್ರಿಕೆಗಳನ್ನು ಸಾಮಾಜಿಕ ಜಾಲತಾಣವಾದ ಹೆಲೋಆ್ಯಪ್‌ ಮತ್ತು ವಾಟ್ಸ್‌ಆ್ಯಪ್‌ ಮೂಲಕ ಹರಿಬಿಟ್ಟು ವಿದ್ಯಾರ್ಥಿಗಳು, ಪಾಲಕ, ಪೋಷಕರಲ್ಲಿ ಆತಂಕ ಉಂಟು ಮಾಡಿದವರ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಈಗ ಇವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಪೊಲೀಸ್‌ ಇಲಾಖೆಗೆ ಪತ್ರ ಬರೆಯಲಾಗಿದೆ.

ಈ ಕುರಿತು ತಮ್ಮ ಅಧೀನದ ಪೊಲೀಸ್‌ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌ ಅವರು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ಪ್ರವೀಣ್‌ ಸೂದ್‌ ಅವರಿಗೆ ಪತ್ರ ಬರೆದು ಕೋರಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next