ಕೊಳ್ಳೇಗಾಲ: ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಸವಲತ್ತು ಸಮರ್ಪಕವಾಗಿ ದೊರಕುತ್ತಿಲ್ಲ. ಕೂಡಲೇ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಾಪಂ ಅಧ್ಯಕ್ಷ ರಾಜೇಂದ್ರ ಎಚ್ಚರಿಕೆ ನೀಡಿದರು.
ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ತಾಪಂ ಸದಸ್ಯ ಜಾವೇದ್ ಅಹಮದ್ ಮಾತನಾಡಿ, ಅಂಗನವಾಡಿಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ಆಹಾರ ಪದಾರ್ಥಗಳು ದುರ್ಬಳಕೆಯಾಗುತ್ತಿವೆ. ಈ ಬಗ್ಗೆ ಸಿಡಿಪಿಒ ನಾಗೇಶ್ ಸಮರ್ಪಕವಾಗಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿಲ್ಲ ಎಂದು ದೂರಿದರು.
ಈ ಕುರಿತು ಪ್ರತಿಕ್ರಿಯಿಸಿದ ತಾಪಂ ಅಧ್ಯಕ್ಷ ರಾಜೇಂದ್ರ, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಬೇಕು. ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುವ ಆಹಾರ ಪದಾರ್ಥ ದುಬಳìಕೆ ಮಾಡಿಕೊಳ್ಳುವ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಡ್ ನೋಂದಣಿಗೆ ಅಲೆದಾಡಬೇಕಿದೆ. ಸಂಬಂಧಿಸಿದ ಆರೋಗ್ಯಾಧಿಕಾರಿಗಳ ಗಮನ ಸೆಳೆದು ಕ್ರಮಕೈಗೊಳ್ಳಬೇಕೆಂದು ತಾಪಂ ಮಾಜಿ ಅಧ್ಯಕ್ಷ ರಾಜು ದೂರಿದರು. ಖಾಸಗಿ ಶಾಲೆಗಳಲ್ಲಿ ಡೋನೆಷನ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ತಾಪಂ ಸದಸ್ಯ ಸುರೇಶ್ ಆಗ್ರಹಿಸಿದರು.
ಸರ್ಕಾರದ ಸುತ್ತೋಲೆಯಂತೆ ಹಣ ಸ್ವೀಕರಿಸಬೇಕು. ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ಎಚ್ಚರಿಸಿದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಲತಾ, ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ಕುಮಾರ್, ಇಒ ಉಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು ಹಾಜರಿದ್ದರು.