ರಾಯಚೂರು: ಸಾಮೂಹಿಕ ಶೌಚಗೃಹ ಸೇರಿ ಇತರೆ ಸ್ವತ್ಛತೆ ಕೆಲಸಗಳನ್ನು ಮಾಡುತ್ತಿರುವ ಸಫಾಯಿ ಕರ್ಮಚಾರಿಗಳಿಂದ ನಗರಸಭೆ ಸದಸ್ಯರು ಹಫ್ತಾ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬರುತ್ತಿದ್ದು, ಅಂಥವರ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ| ಅವಿನಾಶ ರಾಜೇಂದ್ರ ಮೆನನ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಸಫಾಯಿ ಕರ್ಮಚಾರಿಗಳಿಂದ ಹಣ ಪಡೆಯುತ್ತಿರುವವರ ವಿರುದ್ಧ ಕ್ರಮ ವಹಿಸಿ, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳಾಗದಂತೆ ಎಚ್ಚರವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಜಾರಿಗೊಳಿಸಲಾಗಿದೆ. ಅವುಗಳ ಕುರಿತು ಫಲಾನುಭವಿಗಳಿಗೆ ಜಾಗೃತಿ ಮೂಡಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಗತಗೊಳಿಸಬೇಕು ಎಂದರು.
ಸಫಾಯಿ ಕರ್ಮಚಾರಿಗಳ ಶವ ಸಂಸ್ಕಾರಕ್ಕೆ ರುದ್ರಭೂಮಿ ಸಮಸ್ಯೆಯಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು. ಸೂಕ್ತ ಎನಿಸುವ ಕಡೆ 1 ಎಕರೆ ಜಮೀನು ನಿಗದಿ ಪಡಿಸಿ, ಅಲ್ಲಿ ಶವ ಸಂಸ್ಕಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಅದೇ ರೀತಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ತ್ವರಿತಗತಿ ಮುಗಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್‌ಪಿ ನಿಖೀಲ್ ಬಿ. ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಸಮಿತಿ ಸದಸ್ಯರು, ಸಫಾಯಿ ಕರ್ಮಚಾರಿಗಳು ಇದ್ದರು.