Advertisement

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ಸಚಿವ ಅಶ್ವತ್ಥನಾರಾಯಣ

07:38 PM Feb 20, 2023 | Team Udayavani |

ಬೆಂಗಳೂರು: ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳಿದ್ದು, ಈ ದಿಕ್ಕಿನಲ್ಲಿ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಹೇಳಿದರು.

Advertisement

ವಿಧಾನರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಕೆ. ಪ್ರತಾಪ್‌ಸಿಂಹ ನಾಯಕ್‌ ಅವರ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವರ ಪರವಾಗಿ ಅಶ್ವತ್ಥನಾರಾಯಣ ಉತ್ತರ ನೀಡಿದರು.

ಕರ್ನಾಟಕ ಪ್ರವಾಸೋದ್ಯಮ ನೀತಿ 2020-26ರ ಅಡಿಯಲ್ಲಿ ರಾಜ್ಯದಲ್ಲಿ ಗುರುತಿಸಲಾದ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಯೋಜನೆಗಳಲ್ಲಿ ಪರಿಸರ ಸ್ನೇಹಿ ಹಾಗೂ ಸುಸ್ಥಿರ ಪ್ರವಾಸೋದ್ಯಮ ಉಪಕ್ರಮಗಳನ್ನು ಅಳಡಿಸಿಕೊಂಡಿರುವ ಹಾಗೂ ಇಲಾಖೆಯಲ್ಲಿ ನೋಂದಾಯಿತವಾಗಿರುವ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಲಾಗಿದೆ.

ಅದರಂತೆ ಜಲ ಸಂರಕ್ಷಣೆ ಮತ್ತು ಮಳೆ ನೀರು ಸಂಗ್ರಹ, ನವೀಕರಿಸಬಹುದಾದ ಇಂಧನ ಮೂಲಗಳ ಅಳವಡಿಕೆ, ಮಾಲಿನ್ಯ ನಿಯಂತ್ರಣ ಕ್ರಮಗಳ ಅಳವಡಿಕೆಗೆ ಪ್ರತಿಯೊಂದು ಯೋಜನೆಗೆ ತಲಾ 1 ಲಕ್ಷ ರೂ. ಗರಿಷ್ಠ ಸಹಾಯಧನ ಮೊತ್ತ ನಿಗದಿಪಡಿಸಲಾಗಿದೆ. ಇದರಲ್ಲಿ ಪ್ರತೀ ಯೋಜನೆಯ ಕ್ರಮ ಕೈಗೊಳ್ಳುವುದಕ್ಕಾಗಿ ಶೇ. 50ರಷ್ಟು ಆರ್ಥಿಕ ನೆರವು ನೀಡಲಾಗಿದೆ.

ಈ ಯೋಜನೆಯಡಿ ಪ್ರಾಥಮಿಕ ಹಂತವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮಸ್ಥಳ ಮತ್ತು ಮಂಗಳೂರನ್ನು ಪರಿಗಣಿಸಿದ್ದು, ಮುಂಬರುವ ದಿನಗಳಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಒಳಗೊಂಡಂತೆ ಸರ್ಕ್ನೂಟ್‌ ರಚಿಸಲು ಹೆಲಿ ಟೂರಿಸಂ ಸೇವಾ ಪೂರೈಕದಾರರಿಗೆ ತಿಳಿಸಲಾಗಿದೆ. ಈ ಯೋಜನೆಯು ಪ್ರಾಥಮಿಕ ಹಂತದಲ್ಲಿದ್ದು, ಪ್ರವಾಸಿಗರಿಗೆ ಅನುಕೂಲವಾಗುವಂತಹ ಮೂಲಸೌಕರ್ಯಗಳನ್ನು ಒದಗಿಸಲು ಪರಿಶೀಲಿಸಿ ಬಜೆಟ್‌ನಲ್ಲಿ ಒದಗಿಸಿರುವ ಅನುದಾನದ ಲಭ್ಯತೆಗೆ ಅನುಗುಣವಾಗಿ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರದ ಉತ್ತರದಲ್ಲಿ ಹೇಳಲಾಗಿದೆ.

Advertisement

ಇದಕ್ಕೂ ಮೊದಲು ವಿಷಯ ಪ್ರಸ್ತಾವಿಸಿದ ಪ್ರತಾಪ್‌ ಸಿಂಹ ನಾಯಕ್‌, ಕರಾವಳಿ ಭಾಗ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಕಾಂತಾರ ಸಿನೆಮಾ ಬಂದಾದ ಮೇಲಂತೂ ಕರಾವಳಿ ಕಲೆ, ಸಂಸ್ಕೃತಿ ಮತ್ತು ಪರಂಪರೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಹೀಗಿರುವಾಗ ಕರಾವಳಿಯ ಸಾಮರ್ಥ್ಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಅಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next