ಲಕ್ಷ್ಮೇಶ್ವರ: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಮತ್ತೇ ಹಿನ್ನಡೆಯಾಗಿರುವುದು ವಿಷಾದದ ಸಂಗತಿಯಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ, ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ತಜ್ಞರು, ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ವಿಪ ಸದಸ್ಯ ಪ್ರೊ| ಎಸ್.ವಿ. ಸಂಕನೂರ ತಿಳಿಸಿದರು.
ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ, ಪರಿಹಾರ ಕ್ರಮ, ಸೌಲಭ್ಯಗಳ ಕುರಿತು ಚರ್ಚಿಸಿ ಆದ್ಯತೆ ಮೆರೆಗೆ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು, ಶಿಕ್ಷಕವರ್ಗದವರು ಮುಂದಿನ ಶೈಕ್ಷಣಿಕ ವರ್ಷವನ್ನು ಗಂಭೀರವಾಗಿ ತೆಗೆದುಕೊಳ್ಳಲೆ ಬೇಕಾಗಿದೆ ಎಂದು ಹೇಳಿದರು. ಶಿರಹಟ್ಟಿ ಬಿಇಒ ವಿ.ವಿ. ಸಾಲಿಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಿ.ಎಸ್. ಹರ್ಲಾಪುರ, ಎಸ್.ಬಿ. ಅಣ್ಣಿಗೇರಿ ಮತ್ತಿತರರು ಇದ್ದರು.
Advertisement
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ 32ರಿಂದ 31ನೇ ಸ್ಥಾನಕ್ಕೆರಿರುವುದು ದೊಡ್ಡ ಸಾಧನೆಯೇನಲ್ಲ. ಕಳೆದ ಕೆಲ ವರ್ಷಗಳಿಂದ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಶೈಕ್ಷಣಿಕ ಸಾಧನೆ ಹೇಳಿಕೊಳ್ಳುವಂತಿಲ್ಲ. ಈ ಬಗ್ಗೆ ಅಧಿಕಾರ ವರ್ಗದವರು ಹಾಗೂ ಜನಪ್ರತಿನಿಧಿಗಳು ತಲೆತಗ್ಗಿಸುವಂತಾಗಿದೆ. ಈ ನಿಟ್ಟಿನಲ್ಲಿ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ತಾವೂ ಚಿಂತನ ಮಂಥನ ನಡೆಸಿ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ, ಜನಪ್ರತಿನಿಧಿಗಳ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಸಭೆ ಕರೆಯಲಾಗುವುದು ಎಂದು ತಿಳಿಸಿದರು.