ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಗತಿ ಬಗ್ಗೆ ಕೇಂದ್ರ ಗೃಹ ಸಚಿವರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮಾಹಿತಿ ನೀಡಲಾಗಿದ್ದು, ಅವರು ನೀಡಿರುವ ಸಲಹೆ, ಸೂಚನೆಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಿಂತಿರುಗಿರುವ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಜನರನ್ನು ಮತ್ತೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ನೆಲೆ ಕಳೆದುಕೊಂಡ ಮೇಲೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಿರುಚಿ ಅಲ್ಪಸಂಖ್ಯಾತರಲ್ಲಿ ಆತಂಕ ಮೂಡಿಸುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಮಂಗಳೂರು, ಕಲಬುರಗಿಯಲ್ಲಿ ಪ್ರತಿಭಟನಾಕಾರರ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗಿತ್ತು. ನಾವು ಯಾವುದೇ ಪ್ರಚೋದನೆ ನೀಡಿಲ್ಲ. ಕಾಂಗ್ರೆಸ್ ನಾಯಕರ ಪ್ರಚೋದನೆಯಿಂದಲೇ ಗಲಾಟೆ ನಡೆದಿದೆ. ಇದರ ಹೊಣೆಯನ್ನು ಕಾಂಗ್ರೆಸ್ ಹೊರಬೇಕು. ಮಂಗಳೂರಿನಲ್ಲಿ ಪೊಲೀಸರು ಪ್ರಚೋದನೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದುದು ಎಂದು ಹೇಳಿದರು.
ಪ್ರಾಣ ಹಾನಿಯಾಗುವ ರೀತಿಯಲ್ಲಿ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸಿದರೂ ಪ್ರತಿಭಟನಾಕಾರರು ಹೋಗಲಿಲ್ಲ. ಆದರೂ ಪೊಲೀಸರು ಸಂಯಮದಿಂದ ವರ್ತಿಸಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದಾಗ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಘಟನೆ ಬಗ್ಗೆ ನೋವಿದ್ದು, ವಿಷಾದ ವ್ಯಕ್ತಪಡಿಸುತ್ತೇನೆ. ಪರಿಸ್ಥಿತಿ ತಿಳಿಯಾದ ಬಳಿಕ ಘಟನೆ ಸಂಬಂಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ಸರ್ಕಾರ ಹೇಳದೆ ಪೊಲಿಸರು ಗುಂಡು ಹಾರಿಸುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿರುವುದಕ್ಕೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಅವರ ಹೇಳಿಕೆ ಆಶ್ಚರ್ಯ ತಂದಿದೆ. ಆತ್ಮರಕ್ಷಣೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರೂ ಮುಖ್ಯಮಂತ್ರಿಯಾಗಿದ್ದಂತಹವರು. ಗುಂಡು ಹಾರಿಸುವ ಉದ್ದೇಶ ನಮಗೂ ಇಲ್ಲ, ಅಧಿಕಾರಿಗಳಿಗೂ ಇಲ್ಲ. ಆದರೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಕೆಲಸ ಮಾಡಲೇಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡರು.
ಇತಿಹಾಸಕಾರರಾದ ರಾಮಚಂದ್ರ ಗುಹಾ ಅವರ ಬಗ್ಗೆ ಬಹಳ ಗೌರವವಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಏನಾದರೂ ದೋಷವಿದ್ದರೆ ಆ ಬಗ್ಗೆ ಚರ್ಚಿಸಲು ಕೇಂದ್ರ ಸಚಿವರನ್ನು ಭೇಟಿ ಮಾಡಿಸಲು ಸಿದ್ಧನಿದ್ದೇನೆ ಎಂದು ಹೇಳಿದರು.