Advertisement
ಈಗಾಗಲೇ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ.
Related Articles
Advertisement
ಈ ಕುರಿತು ಮುಖ್ಯಮಂತ್ರಿಯವರೂ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: ಆನ್ಲೈನ್ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿಯವರೊದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಚರ್ಚಿಸಿದ ಸಚಿವರು, ರಾಜ್ಯದಲ್ಲಿರುವ 5766 ಗ್ರಾಮಪಂಚಾಯ್ತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದ್ದಾರೆ.
ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ ಎಸ್ ಎಸ್ ಎಲ್ ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಟಾಸ್ಕ್ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.