ಜೇವರ್ಗಿ: ತಾಲೂಕಿನ ಎಲ್ಲ ಸರಕಾರಿ ಪ್ರೌಢ ಶಾಲೆಗಳಲ್ಲಿ ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಲಾಗುತ್ತಿದ್ದು, ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಅಕ್ಷರ ಆವಿಷ್ಕಾರ ಯೋಜನೆ ಅಡಿ 4,500 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನೂಕೂಲವಾಗುವಂತಹ ಪುಸ್ತಕಗಳನ್ನು ವಿತರಿಸಲಾಗುವುದು. ಇಡೀ ಕಲಬುರಗಿ ಜಿಲ್ಲೆಯಲ್ಲಿಯೇ ಜೇವರ್ಗಿ ತಾಲೂಕಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿರುವಂತೆ ನೋಡಿಕೊಳ್ಳುವುದು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ತಾಲೂಕಿನಲ್ಲಿ ಶಾಲಾ, ಕೋಣೆಗಳ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ರೂ.5 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಶಾಲಾ ಕೋಣೆಗಳ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಮುಂಗಾರು ಮತ್ತು ಹಿಂಗಾರು ಬೆಳೆಗಳು ಹಾನಿಗೀಡಾಗಿವೆ. ಒಟ್ಟಾರೆ ಜೇವರ್ಗಿ ತಾಲೂಕಿನಲ್ಲಿ 28,925 ಜನ ರೈತರು ಬೆಳೆ ಹಾನಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ 25,995 ಜನ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮೆ ಮಾಡಲಾಗಿದೆ. ಉಳಿದ ರೈತ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡಬೇಕಾಗಿದೆ. ನಂತರ ಲೋಕೋಪಯೋಗಿ ಇಲಾಖೆ, ಪಂಚಾಯಿತಿರಾಜ್ ಇಲಾಖೆ, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮ, ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ತಹಶೀಲ್ದಾರ್ ವಿನಯಕುಮಾರ ಪಾಟೀಲ, ಯಡ್ರಾಮಿ ತಹಶೀಲ್ದಾರ್ ಶಾಂತಗೌಡ ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಸಿದ್ದು ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ, ಸಿಡಿಪಿಒ ಸಂಗನಗೌಡ ಪಾಟೀಲ ಗುಂದಗಿ, ಯಡ್ರಾಮಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಧನರಾಜ್ ಬೋರಾಳೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ ನಾಯಕ, ಲೋಕೋಪಯೋಗಿ ಇಲಾಖೆ ಎ.ಇ.ಇ ಮುರಳಿಧರರಾವ ಹಂಚಾಟೆ, ಪಂಚಾಯತ್‌ರಾಜ್ ಇಲಾಖೆಯ ಸಹಾಯಕ ಎಂಜಿನಿಯರ್ ಭೀಮರಾವ್ ಪಾಟೀಲ ನೇದಲಗಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು.