ಬೆಳಗಾವಿ: ಕಾಂಗ್ರೆಸ್ ಪಕ್ಷವನ್ನು ಕೆಳಮಟ್ಟದಿಂದ ಸಂಘಟಿಸಿ ಕಾರ್ಯಕರ್ತರ ಬಳಗ ಕಟ್ಟುವುದೇ ನಮ್ಮ ಮುಖ್ಯ ಅಜೆಂಡಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕಾರದ ನಂತರ ಶನಿವಾರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು
ಕೆಳಮಟ್ಟದಿಂದ ಪಕ್ಷವನ್ನು ಸಂಘಟಿಸಿ ಕಾರ್ಯಕರ್ತರ ಬಳಗ ಕಟ್ಟಬೇಕಾಗಿದೆ. ನಮ್ಮ ಪಕ್ಷದ ಸಿದ್ಧಾಂತಗಳನ್ನು ಮತ್ತು ದೇಶದ ಇಂದಿನ ಪರಿಸ್ಥಿತಿಗಳ ಬಗ್ಗೆ ಜನರಿಗೆ ತಿಳಿಸುವಂತಹ ಪ್ರಯತ್ನ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಪರಿವರ್ತನೆ ಮಾಡುತ್ತಿದ್ದೇವೆ. ಬಿಜೆಪಿಯನ್ನು ಕಾಪಿ ಮಾಡುತ್ತಿಲ್ಲ. ಪಕ್ಷಕ್ಕೆ ಸದ್ಯಕ್ಕೆ ಅವಶ್ಯಕತೆ ಇರುವುದನ್ನು ಮಾಡುತ್ತಿದ್ದೇವೆ. ಕೇಡರ್ ಬೇಸ್ ಪಕ್ಷ ಬಿಜೆಪಿ ಒಂದೇ ಅಲ್ಲ.ಬಿಜೆಪಿಗಿಂತ ಮೊದಲೇ ಕಮ್ಯುನಿಸ್ಟ್ ಪಕ್ಷಗಳು ಸೇರಿದಂತೆ ಹಲವು ಪಕ್ಷಗಳು ಕೇಡರ್ ಬೇಸ್ ಪಕ್ಷಗಳಾಗಿವೆ ಎಂದು ಹೇಳಿದರು.
ಉತ್ತರ ಕರ್ನಾಟಕ ಸೇರಿ ಇಡೀ ರಾಜ್ಯದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯಾದ್ಯಂತ ಸಂಚರಿಸಿ ಪಕ್ಷದ ಬಲವರ್ಧನೆಗೆ ಪ್ರಾಮುಖ್ಯತೆ ನೀಡುತ್ತೇವೆ. ಎಲ್ಲ ಪಕ್ಷಗಳಲ್ಲಿ ಗುಂಪುಗಾರಿಕೆ ಇರುವುದು ಸಹಜ. ಆದರೆ ಪಕ್ಷದ ವಿಷಯ ಬಂದಾಗ ಎಲ್ಲರೂ ಒಂದೇ ಎಂದರು.
ಇನ್ನೂ ಪಕ್ಷ ತೊರೆದವರ ಬಗ್ಗೆ ವರದಿ ನೀಡಲು ಸಮಿತಿಯೊಂದನ್ನು ಈಗಾಗಲೇ ರಚಿಸಲಾಗಿದೆ. ವರದಿ ಬಂದ ಬಳಿಕ ಯಾರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತೆವೆ ಎಂದರು.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಕೋಟ್ಯಾಂತರ ರೂ.ಗಳ ಅವ್ಯವಹಾರ ನಡೆದಿದೆ. ಈ ಕುರಿತು ಸಮಗ್ರ ತನಿಖೆಗೆ ಆಗ್ರಹಿಸುತ್ತೇವೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬಗ್ಗೆ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು ಈ ಕುರಿತು ಅವರನ್ನೇ ಕೇಳಿದರೆ ಒಳ್ಳೆಯದು. ಅವರ ಬಗ್ಗೆ ಇಲ್ಲಿ ಚರ್ಚೆ ಬೇಡ. ಎಲ್ಲದರ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದರು.