ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸಂದೇಶದಲ್ಲಿ ಕೇಂದ್ರ ಮತ್ತು ವಿಪಕ್ಷಗಳ ತರಾಟೆ, ಗ್ಯಾರಂಟಿಗಳನ್ನು ಮುಂದುವರಿಸುವ ಅಭಯದ ಜತೆಗೆ ಇತ್ತೀಚಿನ ನೆರೆಹಾವಳಿಯ ಅವಾಂತರಕ್ಕೆ ಪರಿಹಾರೋಪಾಯಗಳು, ನೀರಾವರಿ, ಸಮಗ್ರ ಅಭಿವೃದ್ಧಿಯ ಕರ್ನಾಟಕ ಮಾದರಿ, ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನೋತ್ಸವ, 371ಜೆ ದಶಮಾನೋತ್ಸವ ಸೇರಿ ಹಲವು ಅಂಶಗಳ ಮೇಲೆ ಬೆಳಕು ಚೆಲ್ಲಿದ್ದಾರೆ.
ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಹಾಗೂ ಬಾಬಾ ಸಾಹೇಬ್ ಡಾ| ಬಿ.ಆರ್. ಅಂಬೇಡ್ಕರ್ ಸ್ಥಾಪಿಸಿದ “ಬಹಿಷ್ಕೃತ ಹಿತಕಾರಿಣಿ ಸಭಾ’ಕ್ಕೆ ಈಗ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಕಲಂ 371ಜೆ ಸೇರ್ಪಡೆ ಮಾಡಿದ್ದು, ಈ ಐತಿಹಾಸಿಕ ಘಳಿಗೆಗೆ 10 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅರ್ಥ ಪೂರ್ಣವಾಗಿ ಆಚರಿಸಲು ಸರಕಾರ ನಿರ್ಧರಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮೂಲಕ 5 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಪಶ್ಚಿಮಘಟ್ಟಗಳ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿನ 250 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಭೂ-ಕುಸಿತ ಸಂಭವಿಸಬಹುದಾದ 1,351 ಗ್ರಾಮಗಳನ್ನು ಗುರುತಿಸ ಲಾಗಿದೆ. ಈ ಪ್ರದೇಶಗಳಲ್ಲಿ ಭೂಕುಸಿತ ತಡೆಗಟ್ಟಲು ಭೂ-ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕಾನಿಕ್ಸ್ (ಎನ್‌ಐಆರ್‌ಎಂ) ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಉಪಶಮನ ಕ್ರಮಗಳನ್ನು ಕೈಗೊಳ್ಳಲಾಗುವುದು.
ಹೂಡಿಕೆದಾರರ ಆಕರ್ಷಣೆಗೆ 2025ರ ಫೆಬ್ರವರಿಯಲ್ಲಿ ಇನ್ವೆಸ್ಟ್ ಕರ್ನಾಟಕ ಹಮ್ಮಿಕೊಂಡಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ.