ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ದಿಂದ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕಾರಿ ವಿಚಾರ ಎಂದು ಆತಂಕ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸಾವಿನ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ. ಆದರೂ, ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಸಾರ್ವಜನಿಕರ ಪ್ರಾಣ ರಕ್ಷಣೆಗೆ ಸರ್ಕಾರ ಬದ್ಧ ಎಂದರು. ಕೋವಿಡ್ ಪರೀಕ್ಷೆ ಹೆಚ್ಚಿಸುತ್ತಿರು ವಂತೆಯೇ ಹೆಚ್ಚು ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ 3 ಸಾವಿರ ಪರೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಸೋಂಕು ಮತ್ತು ಸಾವಿನ ಪ್ರಮಾಣ ತಡೆಯುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ದಿಟ್ಟ ಕ್ರಮ ತೆಗೆದು ಕೊಳ್ಳಲಾಗುವುದು. ಕ್ರಮೇಣವಾಗಿ ಸೋಂಕು ಕಡಿಮೆ ಆಗುವ ವಿಶ್ವಾಸ ಇದೆ ಎಂದರು.
ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿ 10 ದಿನಗಳಾದರೂ ಸೋಂಕಿತರ ಮನೆಯ ಮುಂದೆ ಸೀಲ್‌ಡೌನ್ ಮಾಡುವುದು ವಿಳಂಬ ಆಗುತ್ತಿದೆ ಎಂಬ ಪ್ರಶ್ನೆಗೆ ಕೇಂದ್ರ ಮಾರ್ಗಸೂಚಿ ಪ್ರಕಾರ ಸೀಲ್‌ಡೌನ್ ಇತರೆ ಕೆಲಸ ಮಾಡಲಾಗುತ್ತಿದೆ. ಈಗ ವಿಳಂಬ ಆಗುತ್ತಿಲ್ಲ. ತಪ್ಪು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪು ನಡೆದಿದ್ದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮುಂದಿರುವ ರೈಲ್ವೆ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಎಂದು ಹೆಸರಿಡಲು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ. ಆ.15 ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣನವರ ಹೆಸರಿಡುವ ಮೂಲಕ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಜೂನ್ ನಂತರ ಶಿಷ್ಯವೇತನ ನೀಡಲು ಆಡಳಿತ ಮಂಡಳಿ ಒಪ್ಪಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಲ್ಲಾ ಉಸ್ತುವಾರಿ ಸಚಿವನಾಗಿ 5 ತಿಂಗಳಲ್ಲಿ ದಾವಣಗೆರೆ ಜಿಲ್ಲೆಗೆ 20 ಬಾರಿ ಭೇಟಿ ನೀಡಿದ್ದೇನೆ. ನಾನು ಬೆಂಗಳೂರಲ್ಲಿ ಇದ್ದಾಗಲೂ ಪ್ರತಿ ದಿನ ಜಿಲ್ಲಾಧಿಕಾರಿ, ಎಸ್ ಪಿಯವರೊಂದಿಗೆ ಫೋನ್ ಮೂಲಕ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದರು. ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 21 ಕೋಟಿ ವೆಚ್ಚದಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಯಿ-ಮಕ್ಕಳ ಆಸ್ಪತ್ರೆ ಶಂಕುಸ್ಥಾಪನೆ ಮಾಡಲಾಗಿದೆ. ಕುಡಿವ ನೀರಿನ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. 6-7 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.