ಮಡಿಕೇರಿ: ಮತದಾನ ಪ್ರಕ್ರಿಯೆಯಲ್ಲಿ 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕರೆ ನೀಡಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಶನಿವಾರ ನಡೆದ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹದಿನೆಂಟು ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾನ ಮಾಡುವಂತಾಗಬೇಕು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನದ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಮೂಲಕ (ಸ್ವೀಪ್) ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ವಿವಿಧ ವಯೋಮಾನದವರಿಗೆ ಓಟ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದು ಅತ್ಯಗತ್ಯ. 8 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗುವಂತಾಗಬೇಕು. ಆ ನಿಟ್ಟಿನಲ್ಲಿ ಸೇರ್ಪಡೆ ಆಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲೆಯ ಎಲ್ಲಾ ಬೂತ್ ಮಟ್ಟದಲ್ಲಿ, ತಾಲೂಕು ತಹಶೀಲ್ದಾರರ ಕಚೇರಿ, ಉಪ ವಿಭಾಗಾಧಿಕಾರಿಯವರ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸ್ವೀಪ್ ಸಮಿತಿ ಸದಸ್ಯರಾದ ಮಂಜುಳಾ ಅವರು ಮಾತನಾಡಿ ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸ್ವೀಪ್ ಸಮಿತಿ ಸದಸ್ಯರಾದ ಮಲ್ಲೇಸ್ವಾಮಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಮ್ತಾಜ್, ದೇವರಾಜು, ಡಾ| ಆನಂದ್, ಸವಿತಾ ಇತರರು ಇದ್ದರು. ಓಟ ಸ್ಪರ್ಧೆಯು ಗಾಂಧಿ ಮೈದಾನದಿಂದ ಇಂದಿರಾ ಕ್ಯಾಂಟೀನ್, ಎಫ್.ಎಂ.ಕೆ.ಎಂ.ಸಿ. ಕಾಲೇಜಿನವರೆಗೆ ನಡೆಯಿತು. ಬಳಿಕ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕುಮಾರ್ ಮಿಶ್ರ ಅವರು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಓಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಅನಂತರ ಮಾತನಾಡಿದ ಜಿ.ಪಂ.ಸಿಇಒ ಅವರು ಮತದಾನ ಮಾಡುವುದು ಅರ್ಹರೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಮತದಾನ ಮಾಡುವಂತಾಗಬೇಕು ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಕೋರಿದರು. ಓಟ ಸ್ಪರ್ಧೆಯಲ್ಲಿ 19 ರಿಂದ 40 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು, 41 ರಿಂದ 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು, 60 ವರ್ಷ ಮೇಲ್ಪಟ್ಟ ಮಹಿಳೆ ಯರು ಮತ್ತು ಪುರುಷರು ಉತ್ಸಾಹದಿಂದ ಪಾಲ್ಗೊಂಡು ಗಮನ ಸೆಳೆದರು.