ನವದೆಹಲಿ: ಗಡಿನಾಡಿನಲ್ಲಿ ಕನ್ನಡ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣಗೊಂಡಿದ್ದ ಕನ್ನಡ ಚಿತ್ರ ಸ.ಹಿ.ಪ್ರಾ.ಶಾಲೆ ಕಾಸರಗೋಡು, ಪ್ರೇಕ್ಷಕರು ಹಾಗೂ ವಿಮರ್ಶಕರ ಪ್ರಶಂಸೆಗೆ ಪಾತ್ರವಾಗಿತ್ತು . ಕರಾವಳಿ ಮೂಲದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಅವರು ಈ ಚಿತ್ರದ ನಿರ್ದೇಶಕರು. ಈ ಚಿತ್ರಕ್ಕೆ ಪ್ರಸಕ್ತ ಸಾಲಿನ ಅತ್ಯುತ್ತಮ ಮಕ್ಕಳ ಚಿತ್ರ ವಿಭಾಗದಲ್ಲಿ ಸ್ವರ್ಣ ಕಮಲ ಪ್ರಶಸ್ತಿಯೂ ಲಭಿಸಿತ್ತು.
ಇಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ತಾವು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್ ನಲ್ಲಿ ಪ್ರಕಟಿಸಿಕೊಂಡಿರುವ ರಿಷಭ್ ಶೆಟ್ಟಿ ಅವರು, ಈ ಕ್ಷಣ ನನಗೆ ಬಹಳ ಮಹತ್ವದ್ದಾಗಿದೆ, ನಿಮ್ಮೆಲ್ಲರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಈ ಬಾರಿ ಕನ್ನಡ ಚಿತ್ರರಂಗಕ್ಕೆ ವಿವಿಧ ವಿಭಾಗಗಳಲ್ಲಿ ಒಟ್ಟು 11 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದ್ದು ನಮಗೆಲ್ಲಾ ಹೆಮ್ಮೆಯ ವಿಚಾರವಾಗಿದೆ.