ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಐಚ್ಛಿಕ ಕನ್ನಡ ವಿಷಯಕ್ಕೆ ಕನಿಷ್ಠ ಐವರು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ತರಗತಿ ನಡೆಸಲು ಅವಕಾಶ ನೀಡಬೇಕೆಂದು ಕೋರಿ ಉನ್ನತ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಕನಿಷ್ಠ 15 ವಿದ್ಯಾರ್ಥಿಗಳು ದಾಖಲಾಗದೇ ಇರುವ ವಿಭಾಗ ಮತ್ತು ಕಾಂಬಿನೇಷನ್ ನಡೆಸಕೂಡದೆಂಬ ಸರ್ಕಾರ ನಿಯಮಕ್ಕೆ ಸಂಬಂಧಿಸಿದಂತೆ ಕನ್ನಡ ವಿಷಯಕ್ಕೆ ವಿನಾಯ್ತಿ ನೀಡುವಂತೆ ಕೋರಿ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
ಪದವಿ ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸಲು ಕನಿಷ್ಠ 15 ವಿದ್ಯಾರ್ಥಿಗಳು ಇರಬೇಕು. ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡು ತರಗತಿ ನಡೆಸಬಾರದು ಮತ್ತು ಈ ಸಂಬಂಧ ದಾಖಲಾತಿ ಸಂದರ್ಭದಲ್ಲೇ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಇಲಾಖೆ ಪ್ರಾಂಶುಪಾಲರಿಗೆ ತಿಳಿಸಿತ್ತು. ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪ್ರತಿಯೊಬ್ಬರಿಗೂ ಕನ್ನಡ ಕಲಿಯಲು ಅವಕಾಶ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದ್ದರ ಹಿನ್ನೆಲೆಯಲ್ಲಿ ಇಲಾಖೆಯಿಂದ ಸರ್ಕಾರಕ್ಕೆ ಈ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕನ್ನಡ ಕಲಿಕೆಯ ಅವಕಾಶದಿಂದ ಯಾರೊಬ್ಬರು ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಒಂದಂಕಿ ಮೀರದಿದ್ದರೆ ತರಗತಿ ನಡೆಸುವುದು, ಬೋಧನೆ, ಪ್ರಾಧ್ಯಾಪಕರ ನೇಮಕ, ಸೌಲಭ್ಯ ಕಲ್ಪಿಸಲು ಕಷ್ಟಕರವಾಗುತ್ತದೆ. ಈ ಕಾರಣದಿಂದಲೇ ಒಂದಂಕಿ ಮೀರದಿದ್ದರೆ ಬೋಧನೆ ಅವಕಾಶ ನೀಡುತ್ತಿಲ್ಲ. ಕನ್ನಡಕ್ಕೆ ಇದರ ವಿನಾಯ್ತಿ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಉನ್ನತ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.