Advertisement

ಮತ್ತೆ ಸುಪ್ರೀಂನತ್ತ ಅನರ್ಹ ಶಾಸಕರ ಚಿತ್ತ

11:39 PM Aug 21, 2019 | Lakshmi GovindaRaj |

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹಗೊಂಡಿರುವ ಶಾಸಕರು ತಮ್ಮ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ವಿಚಾರಣೆಗಾಗಿ ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಬುಧವಾರ ರಮೇಶ್‌ ಜಾರಕಿಹೊಳಿ ಸೇರಿದಂತೆ ಅನರ್ಹಗೊಂಡಿರುವ ಶಾಸಕರು ದೆಹಲಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ ರಮೇಶ್‌ ಜಾರಕಿಹೊಳಿ ನಿವಾಸದಲ್ಲಿ ಎಲ್ಲರೂ ಸಭೆ ನಡೆಸಿದರು. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ರಿಜಿಸ್ಟ್ರಾರ್‌ಗೆ ಮನವಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಅನರ್ಹಗೊಂಡಿರುವ ಶಾಸಕರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಪರ ವಾದ ಮಾಡುತ್ತಿರುವ ವಕೀಲರ ಮೂಲಕ ಮತ್ತೂಂದು ಅರ್ಜಿ ಸಲ್ಲಿಸಿ, ಪ್ರಕರಣದ ಶೀಘ್ರ ವಿಚಾರಣೆಗೆ ಮನವಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಹೈಕಮಾಂಡ್‌ ಭೇಟಿಗೆ ಯತ್ನ: ಈ ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆಯೂ ಚರ್ಚಿಸಲು ಅನರ್ಹಗೊಂಡಿರುವ ಶಾಸಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ “ಆಪರೇಷನ್‌ ಕಮಲ’ ಕಾರ್ಯಾಚರಣೆಯ ಮುಂಚೂಣಿಯಲ್ಲಿದ್ದ ಡಾ.ಅಶ್ವಥ್‌ ನಾರಾಯಣ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರನ್ನೂ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.

ಅನರ್ಹಗೊಂಡಿರುವುದರಿಂದ ಈ ಪ್ರಕರಣ ಇತ್ಯರ್ಥವಾಗುವವರೆಗೂ ಸಚಿವರಾಗಲು ಅವಕಾಶ ಇಲ್ಲದಿರುವುದರಿಂದ ಪ್ರಕರಣ ಬೇಗ ಇತ್ಯರ್ಥವಾದರೆ, ತಕ್ಷಣ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಹಾಗೂ ಭರವಸೆ ನೀಡಿದಂತೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಬಳಿ ಮನವಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next