ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿ.ಕೆ.ವಿ.ಕೆ) ಆವರಣದಲ್ಲಿ ಹಮ್ಮಿಕೊಂಡಿರುವ ಪ್ರಸಕ್ತ ಸಾಲಿನ ಕೃಷಿ ಮೇಳವನ್ನು ಅ.24 (ಗುರುವಾರ)ರಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಅ.24ರಿಂದ 27ರವರೆಗೆ ನಡೆಯಲಿರುವ ಕೃಷಿ ಮೇಳದಲ್ಲಿ ಸುಧಾರಿತ ಪದ್ಧತಿಗಳನ್ನು ಸಮರ್ಪಕವಾಗಿ ಅಚರಣೆಗೆ ತಂದಿರುವ ಪ್ರಾತ್ಯಕ್ಷಿಕೆಗಳು, ಕೃಷಿ ಕ್ಷೇತ್ರಗಳಿಗೆ ಭೇಟಿ, ತಜ್ಞರೊಂದಿಗೆ ಚರ್ಚೆ, ಕೃಷಿ ವಸ್ತು ಪ್ರದರ್ಶನ ನಡೆಯಲಿದೆ. ಈ ಬಾರಿಯ ಘೋಷವಾಕ್ಯ “ನಿಖರ ಕೃಷಿ ಸುಸ್ಥಿರ ಅಭಿವೃದ್ಧಿ’ ಆಗಿದ್ದು, ಇದೇ ಮೊದಲ ಬಾರಿಗೆ ರೈತರು, ಉದ್ಯಮಿಗಳು ಹಾಗೂ ಕೃಷಿ ವಿಜ್ಞಾನಿಗಳ ನಡುವೆ ವ್ಯಾವಹಾರಿಕ ಚರ್ಚೆ ಒಪ್ಪಂದಗಳಿಗೆ ವೇದಿಕ ಕಲ್ಪಿಸಿಕೊಡಲಾಗಿದೆ.
ಮೊದಲ ದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸಂಗಪ್ಪ ಸವದಿ ಮುಖ್ಯ ಅತಿಥಿಗಳಾಗಿ ಭಾಗವಸಲಿದ್ದು, ಶಾಸಕ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಸಲಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿಗಳು ಡಾ.ಎಂ.ಎಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.
ಮಧ್ಯಾಹ್ನ 2.30ಕ್ಕೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು, ಡಾ.ಎಂ.ಎಚ್. ಮರಿಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧನಾ ಪ್ರಶಸ್ತಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಈ ಬಾರಿಯ ಕೃಷಿ ಮೇಳದಲ್ಲಿ ಏಳು ಹೊಸ ತಳಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ತಳಿಗಳ ಬಿತ್ತನೆ ಬೀಜ ಮತ್ತು ಹಣ್ಣನ್ನು ಕೃಷಿ ಮೇಳದ ಮುಖ್ಯ ಸಂಭಾಂಗಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದರ ಜೊತೆಗೆ ಈ ತಳಿಗಳ ಪ್ರಾತ್ಯಕ್ಷಿಕೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ರೈತರು ಕಣ್ಣಾರೆ ನೋಡಬಹುದುದಾಗಿದೆ. ಮೇಳಕ್ಕೆ ಉಚಿತ ಪ್ರವೇಶವಿದೆ.