ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ಹೋರಾಟಕ್ಕೆ ಸಕಲ ಸಿದ್ಧತೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಜ್ಯ ಹಿರಿಯ ನಾಯಕರ ಸಭೆ ಕರೆದು ಕಾರ್ಯತಂತ್ರದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಪಕ್ಷದ ಪದಾಧಿಕಾರಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ಎಐಸಿಸಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ 14 ನಾಯಕರು ಭಾಗವಹಿಸಲಿದ್ದಾರೆ.
ರಾಜ್ಯ ಘಟಕದಲ್ಲಿ ಗುಂಪುಗಾರಿಕೆಯ ಲಕ್ಷಣಗಳು ಕಂಡು ಬಂದಿದ್ದು, ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಖರ್ಗೆ ಪಕ್ಷದ ಮುಖಂಡರಿಗೆ ಸೂಚನೆ ನೀಡುವ ಸಾಧ್ಯತೆ ಇದ್ದು, ಇತರ ಸಿದ್ಧತೆ, ಪ್ರವಾಸ ಯೋಜನೆ, ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆ ನಡೆಯುವ ಸಾಧ್ಯತೆ ಇದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಗೆ ಹಾಜರಾಗುವುದನ್ನು ದೃಢಪಡಿಸಿದ ಅವರ ಕಚೇರಿ, ಕಾಂಗ್ರೆಸ್ ಅಧ್ಯಕ್ಷರು ಮಧ್ಯಾಹ್ನ 2 ಗಂಟೆಗೆ ಕರೆದಿರುವ ರಾಜ್ಯ ಪಕ್ಷದ ನಾಯಕರ ಸಭೆಯಲ್ಲಿ ಭಾಗವಹಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರು ನಾಳೆ ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಶನಿವಾರ ಕಲಬುರಗಿಯಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ರಾಜ್ಯದ ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಚುನಾವಣೆ ಎದುರಿಸುವಂತೆ ಒತ್ತಾಯಿಸಿದ್ದು, ಚುನಾವಣೆಯಲ್ಲಿ ಗೆದ್ದ ಮೇಲೆ ಯಾರು ಮುಖ್ಯಮಂತ್ರಿ ಮತ್ತು ಮಂತ್ರಿಯಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪ್ರತಿಪಾದಿಸಿದ್ದರು.