ಲಕ್ನೋ : ಭಾರತೀಯ ಜನತಾ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೇಂಗಾರ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ ಮಹಿಳೆಯ ತಂದೆಯ ಪೊಲೀಸ್ ಕಸ್ಟಡಿ ಸಾವಿಗೆ ಹೊಣೆಹೊತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಆದಿತ್ಯನಾಥ್ ಅವರು ಈ ಪ್ರಕರಣದ ಬಗ್ಗೆ ನಿಷ್ಪಕ್ಷ ತನಿಖೆಯನ್ನು ನಡೆಸಬೇಕು ಮತ್ತು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಿರುವುದಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.
ಅತ್ಯಾಚಾರಕ್ಕೆ ಗುರಿಯಾಗಿದ್ದಳೆನ್ನಲಾದ ಮಹಿಳೆಯು ಕಳೆದ ಭಾನುವಾರ ಲಕ್ನೋದಲ್ಲಿನ ಸಿಎಂ ಆದಿತ್ಯನಾಥ್ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದನ್ನು ಅನುಸರಿಸಿ ಪೊಲೀಸರು ಆಕೆಯ ತಂದೆಯನ್ನು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿ ಅವರ ಸಾವು ಸಂಭವಿಸಿತ್ತು. ಈ ಪ್ರಕರಣ ಬೆಳಕಿಗೆ ಬಂದಾಗ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳಿಂದ ಪ್ರಬಲ ಖಂಡನೆ ವ್ಯಕ್ತವಾಗಿತ್ತು.