ಆಲಮೇಲ: ಪಟ್ಟಣದಲ್ಲಿ ನೀರಿನ ಸಮಸ್ಯೆಯಿದ್ದು, ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. 1ನೇ ವಾರ್ಡಿನ ವಿನಾಯಕ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದರಿಂದ ಅಲ್ಲಿ ಟ್ಯಾಂಕರ್ ಮೂಲಕ ನೀರೊದಗಿಸಲಾಗುತ್ತಿದೆ. ಉಳಿದೆಡೆ ಕೊಳವೆಬಾವಿ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಯೂ. ಸಾಬೂಜಿ ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಗುರುವಾರ ‘ಆಲಮೇಲ ಜನರಿಗೆ ಶುದ್ಧ ಕುಡಿಯುವ ನೀರು ಮರೀಚಿಕೆ’ ಎಂಬ ಶೀರ್ಷಿಕೆಯಡಿ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಮುಖ್ಯಾಧಿಕಾರಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದಾರೆ.
ಅಕ್ಕ ತಂಗಿ ಬಾವಿ ಹತ್ತಿರ ನಿರ್ಮಾಣಗೊಂಡಿರುವ ಕುಡಿಯುವ ನೀರಿನ ಘಟಕದ ಕಾಮಗಾರಿ ಪೂರ್ಣವಾಗಿಲ್ಲ. ಅದು ಇನ್ನೂ ಪಟ್ಟಣ ಪಂಚಾಯಿತಿಗೆ ಹಸ್ತಾಂತರವಾಗಿಲ್ಲ. ಕುಡಿಯುವ ನೀರಿನ ಘಟಕದ ಕಾಮಗಾರಿ ಸಂಪೂರ್ಣ ಮುಗಿಸಿದ ಬಳಿಕ ಅದನ್ನು ನಮಗೆ ಹಸ್ತಾಂತರಿಸಿದರೆ ನಮ್ಮ ವ್ಯಾಪ್ತಿಗೆ ಪಡೆದು ಮುಂದಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ 9 ಕೊಳವೆಬಾವಿ ಕೊರಸಲಾಗಿದೆ. ಎಲ್ಲ ಬಾವಿಗಳಲ್ಲಿ ಸ್ವಲ್ಪ ಪ್ರಮಾಣದ ನೀರು ಮಾತ್ರವಿದೆ. ಇನ್ನು ಪಟ್ಟಣದ ಕೆಲವಡೆ ಸಮಸ್ಯೆಯಿದ್ದು, ಅದನ್ನು ಸರಿ ಪಡಿಸುವ ಕೆಲಸ ಮಾಡುತ್ತೇವೆ. ಆಲಮೇಲ ವಿನಾಯಕ ನಗರದಲ್ಲಿ ಪ್ರತಿ ಮನೆಗೂ 3 ದಿನಕ್ಕೊಮ್ಮೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದ್ದು, ಪಟ್ಟಣದೆಲ್ಲೆಡೆ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.