Advertisement

ಮಹಾಸಭೆಯಿಂದ ಯಾರಿಗೂ ಬೆಂಬಲವಿಲ್ಲ

12:30 AM Mar 15, 2019 | Team Udayavani |

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಮೂರು ಪಕ್ಷಗಳೂ ಹೆಚ್ಚಿನ ಟಿಕೆಟ್‌ ನೀಡಬೇಕು ಎಂದು ಅಖೀಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Advertisement

ಗುರುವಾರ ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿ ನಂತರ ಮಾತನಾಡಿದ ಅವರು, ವೀರಶೈವ ಮಹಾಸಭೆಯಲ್ಲಿ ಎಲ್ಲ ಪಕ್ಷದ ಮುಖಂಡರೂ ಇದ್ದಾರೆ. ಮಹಾಸಭೆ ಯಾವುದೇ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡುವುದಿಲ್ಲ. ಆದರೆ, ಜೆಡಿಎಸ್‌, ಕಾಂಗ್ರೆಸ್‌ ಹಾಗೂ ಬಿಜೆಪಿ ಮೂರೂ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹಾಗೂ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ಪಕ್ಷ ತೀರ್ಮಾನ ಮಾಡಲಿದೆ ಎಂದರು. ರಾಜ್ಯದ 90 ತಾಲೂಕು ಘಟಕಗಳಿಗೆ, 5 ಜಿಲ್ಲಾ ಘಟಕಗಳಿಗೆ ಮತ್ತು ಕೇರಳ ರಾಜ್ಯಘಟಕಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ ಎಂದರು. ವೀರಶೈವ ಲಿಂಗಾಯತ ಭವನ: ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಮತ್ತು ವಿದ್ಯಾರ್ಥಿಗಳ ಉಚಿತ ವಸತಿ ನಿಲಯ ತೆರೆಯುವ ಬಗ್ಗೆ ನಿರ್ಧರಿಸಲಾಗಿದೆ ಎಂದರು.

ಅಧಿಕೃತ ಆಯ್ಕೆ ಪ್ರಮಾಣ ಪತ್ರ: ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್‌ ಅಧಿಕಾರಿ ವಿ. ಉಮೇಶ್‌ ಅವರು, ಶಾಮನೂರು ಶಿವಶಂಕರಪ್ಪ ಮತ್ತು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಎನ್‌.ತಿಪ್ಪಣ್ಣ ಅವರಿಗೆ ಆಯ್ಕೆ ಪ್ರಮಾಣ ಪತ್ರವನ್ನು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next