ಬೆಂಗಳೂರು: ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಚರ್ಚೆಗೆ ಸರ್ವ ಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣ, ಕಾವೇರಿ, ಮಹಾದಾಯಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಕೋರ್ಟಿನಲ್ಲಿ ವಿವಿಧ ಹಂತಗಳಲ್ಲಿ ಇರುವ ಕೇಸ್ ಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಜನವರಿ ಅಂತ್ಯದಲ್ಲಿ ಮತ್ತೊಂದು ವರ್ಚುವಲ್ ಸಭೆ ಮಾಡುತ್ತೇವೆ ಎಂದು ತಿಳಿಸಿದರು.
ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷಗಳ ಸಭೆ ಕರೆದು ಜಲವಿವಾದಗಳ ಬಗ್ಗೆ ಚರ್ಚೆ ಮಾಡಲಾಗುವುದು. ಕಾನೂನಿನ ಹೋರಾಟದ ಪ್ರಗತಿ ಬಗ್ಗೆ, ಮುಂದಿನ ನಿಲುವಿನ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ ಸಲಹೆ ಪಡೆಯುತ್ತೇವೆ ಎಂದರು.
ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಅವರು ಪ್ರತಿಕ್ರಿಯಿಸಿ, ರಾಜ್ಯಕ್ಕೆ ಸಂಬಂಧಿಸಿದ ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸುಪ್ರೀಂಕೋರ್ಟ್ ನಲ್ಲಿರುವ ಪ್ರಕರಣಗಳ ಬಗ್ಗೆ ಕಾನೂನು ತಂಡದ ಜತೆ ಚರ್ಚೆ ನಡೆಸಿದ್ದೇವೆ. ಕೆಲವು ನಿರ್ದೇಶನಗಳನ್ನು ಸಿಎಂ ನೀಡಿದ್ದಾರೆ. ಮೇಕೆದಾಟು ಬಗ್ಗೆ ಪೂರ್ಣ ಮಾಹಿತಿ ಪಡೆಯಲಾಗಿದೆ. ಫೆ.14 ರಂದು ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಇದರ ವಿಚಾರಣೆ ಇದೆ. ಇದಕ್ಕೂ ಮುನ್ನ ಮತ್ತೊಮ್ಮೆ ಸಿಎಂ ಸಭೆ ನಡೆಸುತ್ತಾರೆ. ಮಹದಾಯಿ ಪ್ರಕರಣದಲ್ಲಿ ಅಂತಿಮ ವಿಚಾರಣೆ ಬಾಕಿ ಇದೆ
ಇದರ ಜತೆ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರವಾಗಿ ಮುಗಿಸಲು ಸೂಚಿಸಲಾಗಿದೆ ಎಂದರು.