ಹಾವೇರಿ: ಈ ಬಾರಿ ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದು ಕೋವಿಡ್ ಸುರಕ್ಷತೆ ಮಾರ್ಗಸೂಚಿಯೊಂದಿಗೆ ನಕಲು ಮುಕ್ತ ಹಾಗೂ ಶಿಸ್ತು ಬದ್ಧವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಜಿಲ್ಲೆಯಲ್ಲಿ 21,511 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 75 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ 908 ಕೊಠಡಿಗಳು ಪರೀಕ್ಷೆ ನಡೆಸಲು ಅಗತ್ಯವಿತ್ತು. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಪರಸ್ಪರ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಕೊಠಡಿಗಳ ಜೊತೆಗೆ ಹೆಚ್ಚುವರಿ ಕೊಠಡಿಗಳನ್ನು ಸೇರಿಸಿ ಒಟ್ಟು 1420 ಕೊಠಡಿಗಳನ್ನು ಗುರುತಿಸಲಾಗಿದೆ. ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಒಬ್ಬರಿಂದ ಒಬ್ಬರಿಗೆ ಕನಿಷ್ಠ ಮೂರುವರೆ ಅಡಿ ಅಂತರ ಕಾಪಾಡಿ ವಿದ್ಯಾರ್ಥಿಗಳನ್ನು ಕೂರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲರಿಗೂ ಸ್ಕ್ರೀನಿಂಗ್ ಮಾಡಲು, ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಜ್ವರ, ಕೆಮ್ಮಿನ ಲಕ್ಷಣಗಳು ಅಥವಾ ಕಂಟೇನ್ಮೆಂಟ್ ಕೇಂದ್ರದಿಂದ ಬರುವ ಪರೀಕ್ಷಾರ್ಥಿಗಳಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಿ ಮಾರ್ಗ ಸೂಚಿಯಂತೆ ಆರು ಅಡಿ ಅಂತರದಲ್ಲಿ ಮಕ್ಕಳು ಪರೀಕ್ಷೆ ಬರೆಯಲು ಕ್ರಮವಹಿಸಲಾಗಿದೆ.
ಎಲ್ಲರಿಗೂ ಮಾಸ್ಕ್: ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಲು ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯನ್ನು ಕೂಡ್ರಿಸಿ ಹಾಗೂ ಒಂದು ಕೊಠಡಿಗೆ ಕೇವಲ 18 ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಸಲು ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ ಅಗತ್ಯವಿರುವ ಪರೀಕ್ಷಾ ಕೇಂದ್ರಗಳಿಗೆ ಬೇರೆ ಶಾಲೆಗಳಿಂದ ಡೆಸ್ಕ್ ಗಳನ್ನು ತರಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳಿಗಾಗಿ ಸಂಘ ಸಂಸ್ಥೆಗಳು, ದಾನಿಗಳು ಸಾವಿರಾರು ಸಂಖ್ಯೆಯಲ್ಲಿ ಮಾಸ್ಕ್ ಗಳನ್ನು ಉಚಿತವಾಗಿ ನೀಡಿದ್ದಾರೆ. ಪರೀಕ್ಷೆಗೆ ಅಗತ್ಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕೋವಿಡ್ ಭೀತಿಯಿರುವ ಈ ಸಮಯದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಮೂಲಸೌಕರ್ಯ, ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕೋವಿಡ್ ಹರಡದಂತೆ ತಡೆಯಲು ಪ್ರತಿ ಕೇಂದ್ರಗಳಲ್ಲಿಯೂ ನೀರು, ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ.
ವಾಹನ ವ್ಯವಸ್ಥೆ: ಪರೀಕ್ಷಾ ಕೇಂದ್ರಗಳಿಗೆ ವಿವಿಧ ಹಳ್ಳಿಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಸಾರಿಗೆ ಮಾರ್ಗಗಳಿಲ್ಲದ ಊರುಗಳಿಗೆ ಖಾಸಗಿ ಶಾಲಾ ಬಸ್‌ಗಳು ವಾಹನಗಳ ವ್ಯವಸ್ಥೆ ಮಾಡಬೇಕು. ಪ್ರತಿ ವಿದ್ಯಾರ್ಥಿಗೆ ವೈಯಕ್ತಿವಾಗಿ ಸಂಪರ್ಕಿಸಿ ಅವರು ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಲು ಸಹ ಕ್ರಮವಹಿಸಲಾಗಿದೆ. ಒಟ್ಟಾರೆ ಆರೋಗ್ಯ ಸುರಕ್ಷತಾ ಕ್ರಮಗಳೊಂದಿಗೆ ಎಸ್ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದ್ದು ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಲು ಸಿದ್ಧತೆಯಲ್ಲಿ ತೊಡಗಿದ್ದಾರೆ.