ಬೆಳಗಾವಿ: ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ಮಾಡಿದ್ದಾರೆ.
ನಗರದ ಕ್ಯಾಂಪ್ ಪ್ರದೇಶದಲ್ಲಿರುವ ದಂಡು ಮಂಡಳಿ ಕಚೇರಿ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು, ಮಂಡಳಿ ಸಿಇಒ ಕೆ. ಆನಂದ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಂಡು ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಯೊಬ್ಬರು ನೀಡಿದ ದೂರಿನ ಅನ್ವಯ ಬೆಂಗಳೂರು ಮತ್ತು ದೆಹಲಿ ಸಿಬಿಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಕೇಂದ್ರದ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇದು ರಾಜ್ಯದ ಏಕೈಕ ದಂಡುಮಂಡಳಿ ಕಚೇರಿಯಾಗಿದೆ. ಈ ದಂಡು ಮಂಡಳಿಯಲ್ಲಿ 2021ರಲ್ಲಿ ಕ್ಲರ್ಕ್, ಸ್ಟೆನೋಗ್ರಾಫರ್ ಸೇರಿ 19 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬಗ್ಗೆ ದೂರು ನೀಡಿದ್ದ ಕ್ಲೇಟನ್ ಕೊಯ್ಲಿಲೊ ಸುದ್ದಿಗಾರರ ಜೊತೆಗೆ ಮಾತನಾಡಿ ದಂಡು ಮಂಡಳಿಯಲ್ಲಿ ಕಳೆದ 10 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಅಕ್ರಮವಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂದು ಹಲವಾರು ಬಾರಿ ದೂರು ನೀಡಿದ್ದರೂ ಪ್ರಯೋಜನ ಆಗಿರಲಿಲ್ಲ. ಅಲ್ಲದೇ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಯಾವುದೆ ಕ್ರಮ ಕೈಗೊಂಡಿರಲಿಲ್ಲ ಎಂದರು.
ಇಲ್ಲಿರುವ ಸಿಬ್ಬಂದಿಗಳು ಹಣ ಇಲ್ಲದೆ ಯಾವುದೇ ಕೆಲಸ ಮಾಡುವುದಿಲ್ಲ. ದಂಡು ಮಂಡಳಿಯಲ್ಲಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿದ ಕಟ್ಟಡದಲ್ಲಿಯೂ ಅಕ್ರಮ ಎಸಗಿದ್ದಾರೆ. ದಂಡುಮಂಡಳಿಯ ಎಲ್ಲ ಅವ್ಯವಹಾರ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.