ಮಂಗಳೂರು: ಆಯುಷ್ ಆಸ್ಪತ್ರೆಯ ಉಪಕರಣ ಖರೀದಿಗೆ 28 ಲಕ್ಷ ರೂ. ವೆಚ್ಚದ ಸಿಎಸ್.ಆರ್ ಯೋಜನೆ ಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಆದೇಶಿಸಿದ್ದಾರೆ.
ಪ್ರಕರಣ ಕುರಿತಂತೆ ಮಂಗಳೂರು ಜಿಲ್ಲಾ ಆಯುಷ್ ಅಧಿಕಾರಿ ಖುದ್ದು ಸಚಿವರನ್ನು ಭೇಟಿ ಮಾಡಿ ಉದ್ದೇಶಪೂರ್ವಕವಾಗಿ ಆರೋಪ ಹೊರಿಸಲಾಗುತ್ತಿದ್ದು, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಮೂವರು ಸಾಮಾಜಿಕ ಕಾರ್ಯಕರ್ತರು ಅನಗತ್ಯ ದೂರು ಸಲ್ಲಿಸಿ ಆಯುಷ್ ಆಸ್ಪತ್ರೆಯ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿಎಸ್.ಆರ್ ಯೋಜನೆ ಮೂಲಕ ಹಣ ತಂದು ಆಯುಷ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ಶ್ರಮಿಸಲಾಗಿತ್ತು. ಆದರೆ ಮೂವರು ತಮ್ಮ ವೈಯಕ್ತಿಕ ಹಿತಾಸಕ್ತಿಯ ರಕ್ಷಣೆಗಾಗಿ ಸರಕಾರಿ ಕಾರ್ಯಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂದು ದೂರಿದ್ದರು. ಇನ್ನೊಂದಡೆ ಈ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.
ಆರೋಪದಲ್ಲಿ ಸತ್ಯಾಸತ್ಯತೆ ಇದೆಯೇ ಅಥವಾ ವೃಥಾ ದೂರು ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ಹೇಳಲಾಗಿದೆ. ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪ ಮಾಡಿರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುವಂತೆ ಸಚಿವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.