ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಶನಿವಾರ (ಸೆ.14) ಸಂಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಕೋಲಾರದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು (Chaluvaraju) ಮತ್ತು ಮುನಿರತ್ನ ನಡುವಿನ ಮಾತುಕತೆಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಮುನಿರತ್ನ ವಿರುದ್ದ ಜೀವ ಬೆದರಿಕೆ ಮತ್ತು ಜಾತಿನಿಂದನೆ ಆರೋದಡಿ ಕೇಸು ದಾಖಲಾಗಿದೆ. ಬೆಂಗಳೂರು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ಶಾಸಕ ಮುನಿರತ್ನ ಅವರು ಎರಡು ಸಮುದಾಯಗಳ ನಿಂದನೆ ಮಾಡಿದ ಆರೋಪ ಎದುರಿಸುತ್ತಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇತ್ತ ಕಾಂಗ್ರೆಸ್ ಕೂಡಾ ಶಾಸಕ ಮುನಿರತ್ನ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದೆ.
ತಮ್ಮ ವಿರುದ್ದ ಎರಡು ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮುನಿರತ್ನ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ. ಶಾಸಕರು ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಪೊಲೀಸರು ಅವರಿಗಾಗಿ ಹುಡುಕಾಟ ಆರಂಭಿಸಿದ್ದರು. ಇದೀಗ ಅವರನ್ನು ಕೋಲಾರದಲ್ಲಿ ಬಂಧಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮುನಿರತ್ನ ಮನೆ ಬಳಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿ ನಿಯೋಜಿಸಲಾಗಿದೆ.