ನವದೆಹಲಿ:ಆಲ್ಡ್ ನ್ಯೂಸ್ ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ (ಜುಲೈ 08) ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಜುಬೈರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಸದ್ಯ ಬಿಡುಗಡೆಯ ಭಾಗ್ಯ ಇಲ್ಲ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಎದೆಗೆ ಗುಂಡೇಟು: ಜಪಾನ್ ನಲ್ಲಿ ಅತೀ ಹೆಚ್ಚು ಕಾಲ ಆಳ್ವಿಕೆ ನಡೆಸಿದ ಶಿಂಜೋ ಅಬೆ ಇನ್ನಿಲ್ಲ!
ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರಪ್ರದೇಶ ಪೊಲೀಸರು ಜುಬೈರ್ ನನ್ನು ಬಂಧಿಸಿದ್ದರು. ಉತ್ತರಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೀತಾಪುರ್ ಕೋರ್ಟ್ ಜುಬೈರ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ನಂತರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂಕೋರ್ಟ್ ಜಸ್ಟೀಸ್ ಇಂದಿರಾ ಬ್ಯಾನರ್ಜಿ ಅವರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಜುಬೈರ್ ಗೆ ಷರತ್ತಿನ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಧ್ಯಂತರ ಷರತ್ತುಬದ್ಧ ಜಾಮೀನು ಆದೇಶದಲ್ಲಿ, ಜುಬೈರ್ ಬೆಂಗಳೂರು ಅಥವಾ ದೇಶದ ಇತರೆಡೆ ಯಾವುದೇ ಟ್ವೀಟ್ ಅಥವಾ ಸಾಕ್ಷ್ಯ ನಾಶಪಡಿಸುವಂತಿಲ್ಲ ಎಂದು ಸೂಚನೆ ನೀಡಿದೆ. ಉತ್ತರಪ್ರದೇಶದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಮಾತ್ರ ಮಧ್ಯಂತರ ಜಾಮೀನು ಅನ್ವಯವಾಗಲಿದೆ ವಿನಃ, ಬೇರೆ ಯಾವುದೇ ಪ್ರಕರಣಕ್ಕೂ ಅನ್ವಯಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಜುಬೈರ್ ವಿರುದ್ಧದ ತನಿಖೆಗೂ ಕೂಡಾ ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶದಲ್ಲಿ ತಿಳಿಸಿದೆ. ಜುಬೈರ್ ಜಾಮೀನು ಅರ್ಜಿಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಸುಪ್ರೀಂಕೋರ್ಟ್ ಉತ್ತರಪ್ರದೇಶದ ಪ್ರಕರಣಕ್ಕೆ ಮಾತ್ರ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.