Advertisement

ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಪರ್ಯಾಯ ವ್ಯವಸ್ಥೆ : ಲಕ್ಷ್ಮಣ ಸವದಿ

10:26 PM Apr 07, 2021 | Team Udayavani |

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಲವು ಪರ್ಯಾಯ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕರು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬಾರದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ಸಹ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್‌ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾರಂಭಿಸಿರುವುದು ಮತ್ತು ನಾಳೆಯೂ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ದುರ್ದೆçವದ ವಿಚಾರವಾಗಿದೆ. ಆದರೆ ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದ ಅನುಮತಿಗಾಗಿ ಮನವಿ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಚುನಾವಣಾ ಆಯೋಗವು ಈ ಬಗ್ಗೆ ಅನುಮತಿ ನೀಡಿದಲ್ಲಿ ಈ ಬಗ್ಗೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕೆಲವರ ಚಿತಾವಣೆಯಿಂದ ಈ ಮುಷ್ಕರ ಪ್ರಾರಂಭವಾಗಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ವಿಷಮಶೀತ ಜ್ವರ ಹೆಚ್ಚಾಗುತ್ತಿರುವ 13 ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಸೂಚನೆ

ಸರ್ಕಾರದ ಪರ್ಯಾಯ ವ್ಯವಸ್ಥೆಗಳು:
– ಈಗಾಗಲೇ ಕೋವಿಡ್‌ ಸಮಯದಲ್ಲಿ ಸರೆಂಡರ್‌ ಮಾಡಿದ ಖಾಸಗಿ ನೊಂದಾಯಿತ ಪ್ರಯಾಣಿಕ ವರ್ಗದ ವಾಹನಗಳಿಗೆ ಏಪ್ರಿಲ್‌ ತಿಂಗಳಿಗೆ ಅನ್ವಯಿಸುವಂತೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ.
– ಈ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಖಾಸಗಿ ವಾಹನಗಳ ಮುಖಾಂತರ ಪರ್ಯಾಯ ಕಲ್ಪಿಸುವ ಸಂಬಂಧ ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್‌ 66(3)(ಎಫ್)ರ ಅಡಿಯಲ್ಲಿ ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಪ್ರಯಾಣಿಕರ ವಾಹನಗಳಿಗೆ ರಹದಾರಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.
– ರಾಜ್ಯದಲ್ಲಿ ಖಾಸಗಿ ಟ್ಯಾಕ್ಸಿ, ಮಿನಿ ಬಸ್‌, ಬಸ್ಸುಗಳ ಮಾಲೀಕರ ಸಂಘದೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತೆ ಕೋರಲಾಗಿದೆ.
– ಸಾರಿಗೆ ನಿಗಮಗಳ ಬಸ್‌ ನಿಲ್ದಾಣ ಮತ್ತು ಘಟಕಗಳಲ್ಲಿ ಖಾಸಗಿ ಬಸ್ಸುಗಳ ನಿಲುಗಡೆಗಾಗಿ ಸ್ಥಳವಕಾಶವನ್ನು ಮತ್ತು ನಿಲ್ದಾಣದಿಂದ ಕಾರ್ಯಾಚರಣೆ ಮಾಡಲು ಅವಕಾಶ ಒದಗಿಸಲಾಗಿದೆ.
– ದೂರದ ಸ್ಥಳಗಳಿಗೆ ತೆರಳಲಿರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶಗಳಿಂದ ಬೆಂಗಳೂರಿನಿಂದ ಬೆಳಗಾವಿ, ಕಲಬುರಗಿ, ಬೀದರ್‌, ಕಾರವಾರ, ವಿಜಯಪುರ, ಶಿವಮೊಗ್ಗ, ಮೈಸೂರು ಮುಂತಾದ ಕಡೆಗಳಿಗೆ ಹೆಚ್ಚಿನ ರೈಲು ಸಂಪರ್ಕವನ್ನು ಒದಗಿಸುವಂತೆ ರೈಲ್ವೆ ಇಲಾಖೆಯನ್ನು ಕೋರಲಾಗಿದೆ.
– ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ರೈಲುಗಳನ್ನು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

Advertisement

ಈ ಎಲ್ಲಾ ಪರ್ಯಾಯ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ಇಂತಹ ಸಂಕಷ್ಟದ ಸಮಯದಲ್ಲಿ ಸಹಕರಿಸಬೇಕೆಂದು ಕೋರಿದ್ದಾರೆ. ಅಲ್ಲದೆ ಸಾರಿಗೆ ನಿಗಮಗಳ ನೌಕರರು ಮುಷ್ಕರವನ್ನು ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next