ಬೆಂಗಳೂರು: “ನೆರೆಹೊರೆ’ ಶಾಲೆಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತು ತೀರ್ಪನ್ನು ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ.
ಈ ಸಂಬಂಧ ಎಜುಕೇಷನ್ ರೈಟ್ಸ್ ಟ್ರಸ್ಟ್‌ನ ಸಿ. ಸುರೇಶ್ ಕುಮಾರ್ ಮತ್ತಿತರರು ಹಾಗೂ ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್. ಯೋಗಾನಂದ ಸಲ್ಲಿಸಿದ್ದ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ವಾದ-ಪ್ರತಿವಾದ ಆಲಿಕೆ ಪೂರ್ಣಗೊಳಿಸಿದ ಬಳಿಕ ತೀರ್ಪು ಕಾಯ್ದಿರಿಸುವುದಾಗಿ ಹೇಳಿತು.
ನೆರೆಹೊರೆಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಅಂತಹ ಕಡೆ ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರವು, ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು-2012ರ ನಿಯಮ 4ಕ್ಕೆ ತಿದ್ದುಪಡಿ ತಂದು 2019ರ ಜ.30ರಂದು ಅಧಿಸೂಚನೆ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರದ ಈ ತೀರ್ಮಾನದಿಂದ ಬಡ ಮಕ್ಕಳಿಗೆ ಅನ್ಯಾಯವಾಗಲಿದೆ. ಅಲ್ಲದೇ ಈ ತಿದ್ದುಪಡಿ ಕೇಂದ್ರದ “”ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಮೂಲ ಕಾಯ್ದೆ-2009’ಕ್ಕೆ ತದ್ವಿರುದ್ಧವಾಗಿದೆ. ಆದ್ದರಿಂದ ಈ ಅಧಿಸೂಚನೆ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಆದರೆ, 2012ರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯಲ್ಲಿ ಭಾರಿ ಪ್ರಮಾಣದ ಕುಸಿತ ಉಂಟಾಗಿದೆ. ಇದನ್ನು ತಡೆದು ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ತನ್ನ ನಿರ್ಧಾರ ಸಮರ್ಥಿಸಿಕೊಂಡಿದೆ.