ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,451 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,241ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಏಪ್ರಿಲ್ 22) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕುಡಿದ ಅಮಲಿನಲ್ಲಿ ಬಿದ್ದು ಯುವಕ ಸಾವು: ಕೊಲೆ ಎಂದು ದೂರು ನೀಡಿದ ದಾರಿಹೋಕರು
ಕಳೆದ ಮೂರು ದಿನಗಳಿಂದ ದೇಶದಲ್ಲಿ 2,000ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರ (ಏ.21) ಭಾರತದಲ್ಲಿ 2,380 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 1231 ಮಂದಿ ಗುಣಮುಖರಾಗಿದ್ದರು.
ಗುರುವಾರ 13,433ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿತ್ತು. 24ಗಂಟೆಯಲ್ಲಿ 808 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಪರಿಣಾಮ ಶುಕ್ರವಾರ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 14,241ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.
24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದ 54 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,22,116ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,52,425ಕ್ಕೆ ಹೆಚ್ಚಳವಾಗಿದೆ ಎಂದು ಸಚಿವಾಲಯ ಹೇಳಿದೆ.