ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ , ಗೃಹ ಸಚಿವ ಅಮಿತ್ ಶಾ ಅವರು ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಕುರಿತಾಗಿ ರಣತಂತ್ರಗಳನ್ನು ಆರಂಭಿಸಿದ್ದಾರೆ.
ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್‌ನ ವಿಧಾನಸಭೆಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಬಿಜೆಪಿಯ ಕೋರ್ ಕಮಿಟಿ ಸದಸ್ಯರೊಂದಿಗೆ ಶಾ ಮಾತುಕತೆ ನಡೆಸುತ್ತಿದ್ದಾರೆ.
ಮೂರು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿದ್ದು ಅಧಿಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಣತಂತ್ರಗಳನ್ನು ಸಿದ್ದಮಾಡುತ್ತಿದ್ದಾರೆ. ಕಾರ್ಯಕರ್ತರಲ್ಲಿ ಮತ್ತೆ ಉತ್ಸಾಹ ತುಂಬಲು ಸಲಹೆಗಳನ್ನು ನೀಡುತ್ತಿದ್ದಾರೆ.
ಜಾರ್ಖಂಡ್‌ನಲ್ಲಿ ಬಿಜೆಪಿ ಕಾಂಗ್ರೆಸ್-ಆರ್‌ಜೆಡಿ-ಜೆಎಂಎಂ ಮೈತ್ರಿಕೂಟದಿಂದ ಭಾರೀ ಸವಾಲು ಎದುರಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆ ನೆಚ್ಚಿಕೊಂಡಿದ್ದ ಬಿಜೆಪಿ 14 ರ ಪೈಕಿ 12 ಸ್ಥಾನಗಳನ್ನುಗೆದಿತ್ತು,ಆದರೆ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್‌ದಾಸ್ ವಿರುದ್ಧ ಆಡಳಿತ ವಿರೋಧಿ ಅಲೆನಿರ್ಮಾಣವಾಗಿದೆ ಎನ್ನುವ ವಿಚಾರ ಶಾ ಅವರ ತಲೆ ಕೆಡಿಸಿದೆ.
ಹರಿಯಾಣದಲ್ಲೂ ಬಿಜೆಪಿಗೆ ಕಾಂಗ್ರೆಸ್, ಐಎನ್‌ಎಲ್‌ಡಿ ಮತ್ತು ಜನಹಿತ ಕಾಂಗ್ರೆಸ್ ಸವಾಲು ನೀಡುತ್ತಿವೆ.
ಮಹಾರಾಷ್ಟ್ರದಲ್ಲಿ ಈ ಬಾರಿ ಬಿಜೆಪಿ -ಶಿವಸೇನೆಮತ್ತು ಎನ್‌ಡಿಎ ಮೈತ್ರಿಕೂಟ ಸ್ಪರ್ಧಿಸಲಿದ್ದು,ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ 48 ಸ್ಥಾನಗಳ ಪೈಕಿ 41 ರಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು.