ಮೈಸೂರು/ಚಾಮರಾಜನಗರ: ಮೈಸೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಗುರುವಾರ ರಾತ್ರಿ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಶುಕ್ರವಾರ ಬೆಳಗ್ಗೆ 9.20ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.
9.50ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥರ ಜತೆ ಮಾತುಕತೆ ನಡೆಸಲಿದ್ದು, ನಂತರ ಪುರಭವನ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕ್ಯಾತಮಾರನಹಳ್ಳಿಗೆ ತೆರಳಿ ಕಳೆದ ವರ್ಷ ಹತ್ಯೆಗೀಡಾದ ಆರೆಸ್ಸೆಸ್ ಕಾರ್ಯಕರ್ತ ರಾಜು ಅವರ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಬೆಳಗ್ಗೆ 11ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಗರದ 3 ವಿಧಾನಸಭಾ ಕ್ಷೇತ್ರಗಳ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾಜೇಂದ್ರ ಕಲಾಮಂದಿರದಲ್ಲಿ ದಲಿತ ಮುಖಂಡರ ಜತೆಗೆ ಸಂವಾದ ನಡೆಸಿ, ಮಧ್ಯಾಹ್ನದ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಕೊಳ್ಳೇಗಾಲಕ್ಕೆ ತೆರಳಿ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಚಾಮರಾಜ ನಗರದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಎಸ್‌ಟಿ ಸಮಾವೇಶದಲ್ಲಿ ಭಾಗವಹಿಸುವರು. ಸಂಜೆ ನಂಜನಗೂಡಿಗೆ ಆಗಮಿಸಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವರು.