ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ತೃತೀಯ ರಂಗಕ್ಕೆ ಮತ್ತೆ ಶಕ್ತಿ ತುಂಬುವ ನಿಟ್ಟಿನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗುರುವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.
ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲ ಒಂದಾಗಿದ್ದೇವೆ.ಎನ್ ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು.ಇದಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು. ಇದರಲ್ಲಿ ಹೆಚ್ಚಿನ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ನಾಯ್ಡು ಅವರು ದೇವೇಗೌಡರ ಜೊತೆಗಿನ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ವಿರೋಧಪಕ್ಷಗಳನ್ನು ಮಟ್ಟಹಾಕಲು ಐಟಿ, ಇ.ಡಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಲೋಕಸಭೆ ಚುನಾವಣೆ ಕುರಿತು ಒಗ್ಗಟ್ಟಿನಿಂದ ಹೋರಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ ಎಂದರು.
2019ರಲ್ಲಿ ರಾಜಕೀಯ ಕ್ರಾಂತಿ. ಚಂದ್ರಬಾಬು ನಾಯ್ಡು ಬಂದ ಮೇಲೆ ರಾಷ್ಟ್ರರಾಜಕಾರಣ ಬದಲಾಗಿದೆ. ಬಿಜೆಪಿಯನ್ನು ಸೋಲಿಸಲು ಪಣ. ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಬಿಜೆಪಿಯೇತರ ಸರ್ಕಾರ ರಚಿಸುವುದೇ ನಮ್ಮ ಗುರಿಯಾಗಿದೆ ಎಂದು ಎಚ್.ಡಿ.ದೇವೇಗೌಡರು ಹೇಳಿದರು.
ಮಾತುಕತೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡಾ ಉಪಸ್ಥಿತರಿದ್ದರು. ನಾಯ್ಡು ಅವರು ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದರು.