ಆಂಧ್ರಪ್ರದೇಶ: ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ.
ಆಂಧ್ರಪ್ರದೇಶದ ಜಗನ್ ಮೋಹನ್ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಕಾರಣ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಈ ಬಾರಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದಿದೆ.
ಮಾರ್ಚ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದವು. ತೆಲಂಗಾಣ, ತಮಿಳುನಾಡು ರಾಜ್ಯಗಳು ಪರೀಕ್ಷೆಯನ್ನು ರದ್ದುಗೊಳಿಸಿದ್ದವು, ಸದ್ಯ ಆಂಧ್ರಪ್ರದೇಶ ರಾಜ್ಯವೂ ಇದೇ ನಿರ್ಧಾರ ಕೈಗೊಂಡಿದೆ.
ಕರ್ನಾಟಕದಲ್ಲಿ ಮುಂದೂಡಿಕೆಯಾಗಿದ್ದ ಪರೀಕ್ಷೆಗಳು ಜೂನ್ 25ರಿಂದ ನಡೆಯಲಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಸರಕಾರ ಯೋಜನೆ ರೂಪಿಸಿದೆ. ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ಯಶಸ್ವಿಯಾಗಿ ನಡೆಸಲಾಗಿದೆ.
ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಘಿದ್ದು, 96 ಜನ ಮೃತಪಟ್ಟಿದ್ದಾರೆ.