ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹಿನ್ನಡೆಯಾಗಿದೆ, ಇಂದೋರ್ ಲೋಕಸಭಾ ಕ್ಷೇತ್ರದ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.
ಕೆಲ ಸಮಯದ ಹಿಂದೆ ಅಕ್ಷಯ್ ಕಾಂತಿ ಅವರು ಬಾಮ್ ರಮೇಶ್ ಮೆಂಡೋಲಾ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಂಕರ್ ಲಾಲ್ವಾನಿ ಅವರ ಬಳಿ ನಾಮಪತ್ರ ಹಿಂಪಡೆದಿದ್ದಾರೆ ಎಂದು ಹೇಳಲಾಗಿದ್ದು ಅಷ್ಟೇ ಅಲ್ಲದೆ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎನ್ನಲಾಗಿದೆ.
ನಾಮಪತ್ರ ಹಿಂಪಡೆದ ಅಕ್ಷಯ್ ಕಾಂತಿ ಅವರ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇದಾದ ಕೆಲವೇ ಹೊತ್ತಿನಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶ ಸರ್ಕಾರದ ಸಂಪುಟ ಸಚಿವ ಕೈಲಾಶ್ ವಿಜಯವರ್ಗಿಯ ಅವರು ಅಕ್ಷಯ್ ಬಾಮ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಫೋಟೋ ಒಂದನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.
ಕೈಲಾಶ್ ಅವರ ಪೋಸ್ಟ್ ಗೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ರಾಜ್ಯಾಧ್ಯಕ್ಷ ವಿಡಿ ಶರ್ಮಾ ಅವರು ಬಿಜೆಪಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ಇಂದೋರ್ ಲೋಕಸಭೆ ಚುನಾವಣೆಗೆ ಮೇ 13 ರಂದು ಮತದಾನ ನಡೆಯಲಿದ್ದು, ಏಪ್ರಿಲ್ 25 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿತ್ತು. ಏಪ್ರಿಲ್ 29 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು ಆದರೆ ಕಾಂಗ್ರೆಸ್ ನಾಯಕರಿಗೆ ಗೊತ್ತಾಗದ ರೀತಿಯಲ್ಲೇ ಅಕ್ಷಯ್ ಕಾಂತಿ ಬಾಮ್ ಅವರನ್ನು ಬಿಜೆಪಿ ತನ್ನತ್ತ ಸೆಳೆದಿದೆ.
ಅಕ್ಷಯ್ ಬಾಮ್ ಅವರನ್ನು ಬಿಜೆಪಿಗೆ ಕರೆತರುವಲ್ಲಿ ಕೈಲಾಶ್ ವಿಜಯವರ್ಗಿಯ ಅವರು ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್