Advertisement

ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ-ಜಾಥಾ

07:52 AM Jun 13, 2020 | Suhan S |

ಬಳ್ಳಾರಿ: ಬಾಲ ಕಾರ್ಮಿಕ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಕೇಂದ್ರ ಮತ್ತು ರಾಜ್ಯ ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಎಸ್‌. ಮಲ್ಲೂರ್‌ ಹೇಳಿದರು.

Advertisement

ಜಿಲ್ಲಾಡಳಿತ, ಜಿಪಂ, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸಹಯೋಗದೊಂದಿಗೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಟೋ ಮೂಲಕ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳು ರಾಷ್ಟ್ರದ ಸಂಪತ್ತು, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶವನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಕೊಳ್ಳುವುದು ಅತ್ಯಂತ ಕಳವಳಕಾರಿಯಾಗಿದೆ. ಈ ನಿಟ್ಟಿನಲ್ಲಿ ಬಾಲಕಾರ್ಮಿಕ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಪಡಬೇಕು ಎಂದು ಹೇಳಿದರು.

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದೆ. 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಇಂತಹ ಮಕ್ಕಳನ್ನು ನಿಯೋಜಿಸಿಕೊಂಡಲ್ಲಿ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರದಿಂದ 50 ಸಾವಿರದವರೆಗೆ ದಂಡ ಕೆಲವೊಮ್ಮೆ ಎರಡನ್ನು ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1ವರ್ಷದಿಂದ 5ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಹಾಗೂ ತಪ್ಪಿತಸ್ಥ ಮಾಲಿಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿಗೆ 20 ಸಾವಿರಗಳ ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಎ.ಮಂಜುನಾಥ್‌, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಿಜಯಲಕ್ಷ್ಮೀ ಮೈದೂರ್‌, ಕಾರ್ಮಿಕ ಅಧಿಕಾರಿಗಳಾದ ಚಂದ್ರಶೇಖರ ಐಲಿ, ಕಮಲ್‌ ಅಲ್ತಾಫ್‌ ಅಹಮದ್‌, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್‌, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಂಜುನಾಥ್‌, ಪಿ.ಎಂ. ಈಶ್ವರಯ್ಯ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next