ಬೆಂಗಳೂರು: ಲೋಕಸಭಾ ಚುನಾವಣೆ ಕಾರ್ತವ್ಯಕ್ಕೆ ಸರ್ಕಾರಿ ಆಸ್ಪತ್ರೆಗಳ ನರ್ಸ್ ಸಹಿತ ಸಿಬ್ಬಂದಿ ವರ್ಗದವರನ್ನು ನಿಯೋಜನೆ ಮಾಡಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಸಿಬ್ಬಂದಿ ಕೊರತೆ ಉಂಟಾಗುತ್ತಿದೆ.
ಹೀಗಾಗಿ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಚುನಾವಣೆ ಕೆಲಸದಿಂದ ವಿನಾಯ್ತಿ ನೀಡುವಂತೆ ಆಸ್ಪತ್ರೆಯ ಮುಖ್ಯಸ್ಥರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ನಗರದ ಮಿಂಟೋ ಕಣ್ಣಿನ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಸರ್ ಸಿ.ವಿ.ರಾಮನ್‌ನಗರ ಜನರಲ್ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರು ಚುನಾವಣಾ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿಯನ್ನು ನಿಯೋಜಿಸದಂತೆ ಮನವಿ ಮಾಡಿದ್ದಾರೆ.
ಇನ್ನು ಶುಕ್ರವಾರ ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ನೇತೃತ್ವದಲ್ಲಿ ಮಿಂಟೋ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಆಸ್ಪತ್ರೆಗೆ ನಿತ್ಯ 600-800 ಮಂದಿ ಹೊರ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಾರೆ. ಶಸ್ತ್ರಚಿಕಿತ್ಸೆ ಸೇರಿದಂತೆ ಒಳರೋಗಿಗಳ ಸೇವೆಗೆ ಸಿಬ್ಬಂದಿ ಅಗತ್ಯತೆ ಇರುತ್ತದೆ. ಹೀಗಾಗಲೇ ಮಿಂಟೋ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ.
ಇನ್ನು ಚುನಾವಣಾ ಕೆಲಸಕ್ಕೆ 28 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ತೊಂದರೆ ಆಗಲಿದೆ. ಹೀಗಾಗಿ, ಆಸ್ಪತ್ರೆ ಸಿಬ್ಬಂದಿಗೆ ವಿನಾಯ್ತಿ ನೀಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ಹಾಗೂ ಉಪಾಧ್ಯಕ್ಷ ಎಂ. ವೆಂಕಟೇಶ್ ಮನವಿ ಮಾಡಿದರು.