Advertisement

ಮಹದಾಯಿ ತೀರ್ಪು ಪ್ರಶ್ನಿಸಿ ಮೇಲ್ಮನವಿ

12:05 PM Sep 15, 2018 | Team Udayavani |

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತ ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದರೊಂದಿಗೆ, ನ್ಯಾಯಾಧಿಕರಣದಲ್ಲಿಯೇ ಸ್ಪಷ್ಟನೆ ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ 15 ದಿನಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಕಾನೂನು ತಂಡಕ್ಕೆ ಸೂಚನೆ ನೀಡಿದೆ.

Advertisement

ಮಹದಾಯಿ ನ್ಯಾಯಾಧಿಕರಣದ ನೀರು ಹಂಚಿಕೆ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಜಲ ಸಂಪನ್ಮೂಲ ಸಚಿವರು, ಇಲಾಖೆ ಅಧಿಕಾರಿಗಳು, ಕಾನೂನು ತಜ್ಞರು, ನೀರಾವರಿ ತಜ್ಞರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವರಾದ ಡಿ.ಕೆ.ಶಿವಕುಮಾರ್‌, ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌ ಉದಯ್‌ ಹೊಳ್ಳ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್‌.ಮಂಜುನಾಥ್‌, ನೀರಾವರಿ ತಜ್ಞರು, ಹಿರಿಯ ವಕೀಲರು, ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉತ್ತರ ಕರ್ನಾಟಕ ಭಾಗದ ಜನರ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳನ್ನು ಎಲ್ಲ ಆಯಾಮಗಳಿಂದ ಪರಿಶೀಲಿಸಿ ಚರ್ಚಿಸಿ ಸಲಹೆ ನೀಡುವಂತೆ ಹೇಳಿದರು. ಅದರಂತೆ ಸುದೀರ್ಘ‌ ಚರ್ಚೆ ನಡೆಯಿತು ಎಂದರು.

ಸಭೆ ಬಳಿಕ ಪ್ರತಿಕ್ರಿಯಿಸಿದ ಸಚಿವ ಡಿ.ಕೆ.ಶಿವಕುಮಾರ್‌, ದೆಹಲಿಯ ಕಾನೂನು ತಜ್ಞರು, ನೀರಾವರಿ ತಜ್ಞರು ಸೇರಿದಂತೆ ಹಲವರ ಸಮ್ಮುಖದಲ್ಲಿ ಸರ್ಕಾರ ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮಹದಾಯಿ ನ್ಯಾಯಾಧಿಕರಣದ ನೀರು ಹಂಚಿಕೆ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಯಾವ ರೀತಿಯಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

Advertisement

ಸುಪ್ರೀಂ ಕೋರ್ಟ್‌ಗೆ ವಿಶೇಷ ಮನವಿಯನ್ನು ಸಮಗ್ರ ಮಾಹಿತಿಯೊಂದಿಗೆ ಸಲ್ಲಿಸುವ ಜತೆಗೆ ಇನ್ನೊಂದೆಡೆ ನ್ಯಾಯಾಧಿಕರಣದಿಂದಲೂ  ಸ್ಪಷ್ಟನೆ ಕೋರಲು ನಿರ್ಧರಿಸಲಾಯಿತು. ರಾಜ್ಯಕ್ಕೆ ಅನುಕೂಲವಾಗುವಂತೆ ಅವಕಾಶವಿರುವ ಎಲ್ಲ ಸಾಧ್ಯತೆಗಳನ್ನೂ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯೂ ಸಲ್ಲಿಕೆಯಾಗಿದ್ದು, ಈ ಬಗ್ಗೆಯೂ ಚರ್ಚಿಸಲಾಯಿತು ಎಂದು ತಿಳಿಸಿದರು.

ಸದ್ಯದ ನೀರು ಹಂಚಿಕೆ ತೀರ್ಪಿನಂತೆ ಸ್ವಲ್ಪವೂ ತಡ ಮಾಡದೆ ನೀರಾವರಿ ಹಾಗೂ ಕುಡಿಯುವ ನೀರಿನ ಯಾವೆಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಿದೆ ಎಂಬ ಬಗ್ಗೆಯೂ ಚರ್ಚಿಸಲಾಯಿತು. ಕಾಮಗಾರಿ ಕೈಗೊಳ್ಳಲು ತಾಂತ್ರಿಕ ಹಾಗೂ ಕಾನೂನಾತ್ಮಕ ವಿಚಾರಗಳ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದೆ. ಎಷ್ಟು ಪ್ರಮಾಣದ ನೀರು ಬಳಸಬಹುದು, ಉಳಿಕೆ ನೀರಿನ ಪ್ರಮಾಣ ಹಾಗೂ ಅದರ ಬಳಕೆ ಬಗ್ಗೆ ಯೋಜನೆ ರೂಪಿಸಲು ಸಿದ್ಧತೆ ನಡೆದಿದೆ ಎಂದು ಹೇಳಿದರು.

ಹಳ್ಳಿಗಳು ಹಾಗೂ ಹುಬ್ಬಳ್ಳಿ- ಧಾರವಾಡ ನಗರಕ್ಕೆ ಪೂರೈಸುವ ನೀರು ಆಧಾರಿಸಿ ಯೋಜನೆ ರೂಪಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ತಿಳಿಸಿದೆ. ಕುಡಿಯುವ ನೀರು ಯೋಜನೆ ಹಾಗೂ ಕೃಷಿ ನೀರಾವರಿಗೆ ಸಂಬಂಧಪಟ್ಟಂತೆ ಸಮಯ ವ್ಯರ್ಥ ಮಾಡದೆ ನೀರು ಬಳಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next