ಬೆಂಗಳೂರು: ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‌ಕುಮಾರ್ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕರನ್ನಾಗಿ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಝಾದ್ ಅವರಿಗೆ ಕಾಂಗ್ರೆಸ್‌ನ ಕೆಲವು ಯುವ ಮುಖಂಡರು ಮನವಿ ಸಲ್ಲಿಸಿದ್ದಾರೆ.
ಸೋಮವಾರ ಸಂಜೆ ರಾಜ್ಯಕ್ಕೆ ಆಗಮಿಸಿದ ಗುಲಾಂ ನಬಿ ಆಝಾದ್ ಅವರನ್ನು ಭೇಟಿ ಮಾಡಿ, ಪ್ರಸಕ್ತ ವಿಧಾನಸಭೆಯಲ್ಲಿ ರಮೇಶ್‌ಕುಮಾರ್ ಪ್ರತಿಪಕ್ಷದ ನಾಯಕರಾಗಿ ಹೆಚ್ಚು ಸಕ್ರಿಯರಾಗಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ನೇಮಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ವಿಧಾನ ಮಂಡಲದ ಎರಡೂ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಚರ್ಚಿಸಲು ಗುಲಾಂ ನಬಿ ಆಝಾದ್ ಸೊಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದರು. ಆದರೆ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದರಿಂದ ಮಂಗಳವಾರ ನಡೆಯಬೇಕಿದ್ದ ಪಕ್ಷದ ಶಾಸಕರ ಸಭೆ ರದ್ದುಗೊಳಿಸಲಾಯಿತು.
ಆದರೆ, ಸೋಮವಾರ ರಾತ್ರಿ ಪಕ್ಷದ ಮುಖಂಡರ ಜೊತೆ ಗುಲಾಂ ನಬಿ ಆಝಾದ್ ಸಭೆ ನಡೆಸಿದ್ದು, ಈ ವೇಳೆ ಮೇಲ್ಮನೆ ಪ್ರತಿಪಕ್ಷದ ನಾಯಕರನ್ನಾಗಿ ಎಸ್.ಆರ್. ಪಾಟೀಲ್ ಅವರನ್ನು ನೇಮಿಸುವ ಬಗ್ಗೆ ಸಭೆಯಲ್ಲಿ ಒಲವು ವ್ಯಕ್ತವಾಗಿದೆ ಎಂದು ತಿಳಿದು ಬಂದಿದ್ದು, ಬುಧವಾರ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ಇನ್ನು ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆಯಾಗದ ಹಿನ್ನೆಲೆಯಲ್ಲಿ ಹಾಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೇ ಸದ್ಯಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆ ಇದೆ.
ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕರನ್ನು ಪ್ರತ್ಯೇಕವಾಗಿ ನೇಮಿಸುವ ಕುರಿತು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಎಚ್.ಕೆ. ಪಾಟೀಲ್, ಆರ್.ವಿ.ದೇಶಪಾಂಡೆ ಹಾಗೂ ಡಾ.ಜಿ.ಪರಮೇಶ್ವರ್ ಅವರ ಹೆಸರುಗಳೂ ಕೇಳಿ ಬರುತ್ತಿವೆ.