ದಾವಣಗೆರೆ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಪಿಡಿಒಗಳು ಗುರುವಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
2006-2007ರಿಂದ 2011-2012ವರೆಗೆ ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು. ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪ್ ಬಿಗೆ ಮೇಲ್ದರ್ಜೆಗೆರಿಸಬೇಕು. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ನಿಯಮವನ್ನು ಕೂಡಲೇ ಜಾರಿಗೊಳಿಸಬೇಕೆಂಬುದು ಸೇರಿ 15 ಬೇಡಿಕೆಗಳ ಈಡೇರಿಕೆಗೆ ಪಿಡಿಒಗಳು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಡಿ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಶೇ. 70ರಷ್ಟು ಗ್ರಾಮೀಣ ಜನತೆಯನ್ನು ಪ್ರತಿನಿಧಿಸುವುದರೊಂದಿಗೆ, ಗ್ರಾಮ ಮಟ್ಟದ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಚರಂಡಿ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ, ರಸ್ತೆ ಸಂಪರ್ಕ, ವಸತಿ, ನರೇಗಾ ಯೋಜನೆಯಡಿ ಉದ್ಯೋಗ ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುತ್ತದೆ. 29 ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡುವ ಹೊಣೆ ಪಿಡಿಒಗಳಿಗೆ ಇರುತ್ತದೆ. ಇಂತಹ ಒತ್ತಡದ ನಡುವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ಮತ್ತು ನೌಕರರು ಕಡಿಮೆ ಸಿಬ್ಬಂದಿಗಳೊಂದಿಗೆ ಅಧಿಕ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವಂತೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ. 15 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘದ ಪದಾಧಿಕಾರಿಗಳಾದ ಐ.ಬಿ. ಸುರೇಖಾ, ಪರಮೇಶ್ ಕೊಲ್ಲೂರು, ಶರಣಪ್ಪ ಮಲವನಶೆಟ್ಟಿ, ತಿಪ್ಪೇಸ್ವಾಮಿ, ಅಭಿಜಿತ್, ನಾಗರಾಜ್, ಉಮೇಶ್, ರೇಣುಕಾಪ್ರಸಾದ್, ಎಂ.ವಿ. ರವಿ, ಶಿರಿನ್‌ತಾಜ್, ಸವಿತಾ ಬಾಯಿ, ಮರುಳಸಿದ್ದಪ್ಪ, ಲೋಹಿತ್, ಯೋಗೇಶ್ ಇತರರು ಈ ಸಂದರ್ಭದಲ್ಲಿದ್ದರು.