Advertisement

ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ

03:59 PM May 19, 2022 | Team Udayavani |

ಬಳ್ಳಾರಿ: ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು, ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಮತ್ತು ಸಾರ್ವಜನಿಕ ಸ್ಮಶಾನ ಇಲ್ಲದೇ ಶವಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಅಥವಾ ತಾಲೂಕುಗಳ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಸ್ಮಶಾನದ ಅವಶ್ಯಕತೆ ಇರುವ ಗ್ರಾಮಸ್ಥರು ಮನವಿ ಸಲ್ಲಿಸಿದ್ದಲ್ಲಿ ಗ್ರಾಮದಲ್ಲಿ ಲಭ್ಯವಿರುವ ಜಮೀನು ಗುರುತಿಸಿ ಸಾರ್ವಜನಿಕ ಸ್ಮಶಾನವಾಗಿ ಪರಿವರ್ತನೆ ಮಾಡಿ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 71ರಡಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗ್ಯೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು, 1966 ರ ನಿಯಮ 974(3)ರಲ್ಲಿ ಜಿಲ್ಲಾಧಿಕಾರಿಯವರಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನು ‘ಬ’ ಖರಾಬು ಎಂದು ವರ್ಗೀಕೃತವಾಗಿದ್ದಲ್ಲಿ ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂಥ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 71 ರನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರನ್ವಯ ಜಿಲ್ಲಾಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

Advertisement

ಈ ಎಲ್ಲ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂಥ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಿ ಸ್ಮಶಾನಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್‌ ರಿಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಜಮೀನು ಒತ್ತುವರಿ

ಸರ್ಕಾರಿ ಜಮೀನು, ಕರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಸೀಲ್ದಾರ್‌ ಅವರಿಗೆ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿ ಪವನ್‌ ಕುಮಾರ್‌ ಮಾಲಪಾಟಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next