ಬೆಂಗಳೂರು: ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ವಕೀಲೆ ಸುಧಾ ಕಾಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಖಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ ವಾದ ಮಂಡಿಸಿ, ಸುಪ್ರಿಂ ಕೋರ್ಟ್ 2006ರಲ್ಲಿ ನೀಡಿದ ಆದೇಶದಂತೆ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳ ವಿರುದ್ಧದ ದೂರುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲು ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಪೊಲೀಸ್ ದೂರು ಪ್ರಾಧಿಕಾರ ರಚಿಸಲಾಗಿದೆ. ಆದರೆ, ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡುತ್ತಿಲ್ಲ. ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿ ಮತ್ತು ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ತಿಳಿಸಿದರು.