ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗಕ್ಕೆ ರಾಜಕೀಯ ಹಿನ್ನೆಲೆ ಹೊಂದಿರುವ ಕೆ. ನಾಗಣ್ಣ ಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಪಿ.ಬಿ. ವರಾಲೆ ಹಾಗೂ ನ್ಯಾ| ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮತ್ತು ಸದಸ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷ ಹುದ್ದೆಯು 2021ರ ಡಿ.5ರಿಂದ ಖಾಲಿಯಾಗಿತ್ತು. ಅಧ್ಯಕ್ಷರ ನೇಮಕಾತಿಗೆ ಸರಕಾರ 2022ರ ಫೆ.2ರಂದು ಅಧಿಸೂಚನೆ ಹೊರಡಿಸಿತ್ತು. ನೇಮಕಾತಿ ಸಮಿತಿಯು ಮೇ 9ರಂದು 10 ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿತ್ತು.
ಈ ಮಧ್ಯೆ ನಾಗಣ್ಣ ಗೌಡ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ಅ.21ರಂದು ಸರಕಾರ ಅಧಿಸೂಚನೆ ಹೊರಡಿಸಿತು. ಅದೇ ದಿನ ನಾಗಣ್ಣ ಗೌಡ ಅಧಿಕಾರ ವಹಿಸಿಕೊಂಡರು. ಆದರೆ ಅವರ ಹೆಸರು 10 ಮಂದಿಯ ಪಟ್ಟಿಯಲ್ಲಿರಲಿಲ್ಲ. ಅವರು ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಅಕ್ರಮ ನೇಮಕಾತಿಯನ್ನು ಪ್ರಶ್ನಿಸಿ ಅರ್ಜಿದಾರರು ಸರಕಾರಕ್ಕೆ ಅ.28ರಂದು ಮನವಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.